ರಾಮನಗರ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಕಾರು ಚಾಲಕ ಉಮೇಶ್, ಪ್ರಯಾಣಿಕರಾದ ಅಕ್ಷತಾ ಸುರೇಂದ್ರ ಈಕೆಯ 6 ತಿಂಗಳ ಮಗು ಸುಮಂತ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತಳ ಪತಿ ಸುರೇಂದ್ರ ಮತ್ತು ಇನ್ನೊಬ್ಬ ಪ್ರಯಾಣಿಕರಾದ ನವನೀತ ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರು ಉಡುಪಿ ಜಿಲ್ಲೆಯ ಬ್ರಹ್ಮಾವರದವರು ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
PublicNext
07/05/2022 03:16 pm