ಬಳ್ಳಾರಿ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಂದಮ್ಮ ಸೇರಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಕೌಲ್ ಬಜಾರ್ ಪ್ಲೈ ಒವರ್ ಬಳಿ ನಡೆದಿದೆ.
ಬಳ್ಳಾರಿಯ ಹೊಸ ಯರ್ರಗುಡಿ ಗ್ರಾಮದ ನಿವಾಸಿ ವೀರೇಶ್ (38), ಅಂಜಲಿ (29) ಹಾಗೂ ದಿನೇಶ್ (5) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂರು ವರ್ಷದ ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೀರೇಶ್ ಮೋರಾಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಬಿಎಡ್ ಪರೀಕ್ಷೆ ಇದ್ದ ಹಿನ್ನಲೆಯಲ್ಲಿ ಪತ್ನಿಯನ್ನು ಹಾಗೂ ಇಬ್ಬರು ಮಕ್ಕಳನ್ನು ಬಳ್ಳಾರಿಗೆ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಗುವನ್ನು ನೋಡಲು ಸಚಿವ ಶ್ರೀರಾಮುಲು ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
24/08/2022 04:01 pm