ದೇವನಹಳ್ಳಿ: ಹಸು ಸೇರಿದಂತೆ ಮೂಕಪ್ರಾಣಿಗಳ ಸೇವೆಗಾಗಿ ಸರ್ಕಾರ ಹಲವು ಯೋಜನೆಗಳ ಮೂಲಕ ಜಾನುವಾರು ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದು, ಜಾನುವಾರು ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿ ಪಶುಪಾಲನೆ ಇಲಾಖೆಯ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಾಣಿ ಸಹಾಯವಾಣಿ ಕೇಂದ್ರ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭವಾಗಿದ್ದು, 24/7 ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಹಾಯವಾಣಿಗೆ ಕರೆ ಮಾಡಿ ಜಾನುವಾರುಗಳಿಗೆ ಸಂಬಂಧಿಸಿದ ಸಹಾಯ ಪಡೆಯಬಹುದು ಎಂದರು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ- ಸಂರಕ್ಷಣೆ ಅಧಿನಿಯಮ 2020ರ ಕಾಯ್ದೆಯಡಿ ಜಾನುವಾರು ಸಂರಕ್ಷಣೆ ಸಾಧ್ಯವಾಗುವುದರಿಂದ ಈ ಕಾಯ್ದೆ ಬಗ್ಗೆ ಅಧಿಕಾರಿಗಳು ಪೂರ್ಣ ಮಾಹಿತಿ ಅರಿತು, ಗ್ರಾಮ ಸಭೆಯಲ್ಲಿ ಭಾಗವಹಿಸಿ ರೈತರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದರು.
ಕರ್ನಾಟಕದ ಇತಿಹಾಸದಲ್ಲೇ ಗೋಶಾಲೆ ಆರಂಭಿಸಲು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಭೂಮಿ ಪೂಜೆ ಮಾಡಲು ತಿಳಿಸಿದರಲ್ಲದೆ, ಪಶುಪಾಲನೆ- ಪಶುವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕರು ಮತ್ತು ಉಪ ನಿರ್ದೇಶಕರು ತಹಶೀಲ್ದಾರ್ ಮೂಲಕ ಗೋಮಾಳ ಜಾಗ ಗುರುತಿಸಿ, ಜಿಲ್ಲಾಧಿಕಾರಿ ಮೂಲಕ ಪ್ರಸ್ತಾವನೆ ಸಲ್ಲಿಸಿದರೆ, ಮಂಜೂರಾತಿ ನೀಡಲಾಗುವುದು ಎಂದರು.
ರಾಜ್ಯಕ್ಕೆ 291 ಪಶು ಸಂಜೀವಿನಿ ಆ್ಯಂಬುಲೆನ್ಸ್ ನೀಡಲು ನಿರ್ಧರಿಸಲಾಗಿದ್ದು, ಈಗಾಗಲೇ 15 ಜಿಲ್ಲೆಗಳಿಗೆ ನೀಡಲಾಗಿದೆ. 1962 ಸಂಖ್ಯೆಗೆ ಕರೆ ಮಾಡಿ ಪಶು ಸಂಜೀವಿನಿ ಆ್ಯಂಬುಲೆನ್ಸ್ ಸೌಲಭ್ಯ ಪಡೆಯಬಹುದು ಎಂದರು.
PublicNext
06/01/2022 08:25 pm