ದೊಡ್ಡಬಳ್ಳಾಪುರ: ಪಾದಚಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾದಚಾರಿಯ ಗಾಯಾಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ನೆಲಮಂಗಲ ರಸ್ತೆಯ ಮೇಘಾಂಜಲಿ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದ್ದು, ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ವೆಂಕಟೇಶ್ ಅವರ ಸೋದರ ಪುನೀತ್(33) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಖಾಸಗಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಪುನೀತ್ ಅವರು ಭಾನುವಾರ ಸಂಜೆ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಕಲ್ಯಾಣ ಮಂಟಪದ ಬಳಿ ಪಾದಚಾರಿ ವ್ಯಕ್ತಿಗೆ ಡಿಕ್ಕಿ ಹೊಡೆದು, ಕೆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಬಿಹಾರ ಮೂಲದ ಪಾದಚಾರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಪುನೀತ್ ಅವರಿಗೆ ಒಂದೂವರೆ ವರ್ಷದ ಹಿಂದೆ ಮದುವೆಯಾಗಿತ್ತು. ಮೃತರಿಗೆ ಪತ್ನಿ, ಮಗು ಇದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/06/2022 09:27 am