ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್. ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಪಂಚಮಸಾಲಿ ಸಮುದಾಯದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿದ್ದಾರೆ ಹೀಗಾಗಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಎಂದು ಕರೆ ಕೊಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ನಿರಾಣಿ ಅವರು, "ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರುತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ," ಎಂದು ಅವರು ಪುನರುಚ್ಚರಿಸಿದರು.
"ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಏಕೈಕ ಸದ್ದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದರು. ಅದೇ ರೀತಿ 2ಎ ಮೀಸಲಾತಿ ಕೊಡುವ ಸಂಬಂಧ ಸಚಿವ ಸಂಪುಟ ಉಪಸಮಿತಿಯನ್ನು ಮಾಡಿದ್ದು ಸಹ ಯಡಿಯೂರಪ್ಪನವರು. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು," ಎಂದು ನಿರಾಣಿ ತಿರುಗೇಟು ನೀಡಿದರು.
Kshetra Samachara
21/09/2022 08:42 pm