ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ "ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ"ಗೆ ಚಾಲನೆ ನೀಡಿ ಮಾತನಾಡಿದರು.
ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದರು.
ಆಗ ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.
ಸ್ವಾತಂತ್ರ್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್‌ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ಆರ್ಚೈವ್ಸ್ ದಾಖಲೆಗಳಿಗೂ ಸಹ ಕಳಿಸಿಕೊಟ್ಟು ನೊಂದಣಿ ಮಾಡಿಸುತ್ತೇವೆ ಎಂದು ತಿಳಿಸಿದರು.
PublicNext
02/10/2022 05:01 pm