ಬೆಂಗಳೂರು: ರಾಜ್ಯಾದಂತ್ಯ ಇಂದಿನಿಂದ ಎಸ್‍ಎಸ್‍ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆ ಬರೆಯುವ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ, ಸ್ಥಳೀಯ ಶಾಸಕ, ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಯಾನಿಟೈಸರ್, ಮಾಸ್ಕ್ ಮತ್ತು ಪೆನ್ನುಗಳನ್ನು ವಿತರಿಸಿ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಎಸ್‍ಎಸ್‍ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಯಾವುದೇ ಭಯ, ಹಿಂಜರಿಕೆ ಇಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ವಿನಾಕಾರಣ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ವಿದ್ಯಾವರ್ಧಕ ಶಾಲೆ ಮತ್ತು ಪಾಂಚಜನ್ಯ ಶಾಲೆಯಲ್ಲಿ ಆರಂಭಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಕ್ಷೇತ್ರ ವ್ಯಾಪ್ತಿಯಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3451 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲ ಮಕ್ಕಳಿಗೂ ಸಚಿವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಪರೀಕ್ಷೆ ಬರೆಯಲು ಪೆನ್ನುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Kshetra Samachara
28/03/2022 11:37 am