ವರದಿ: ಗಣೇಶ್ ಹೆಗಡೆ
ಬೆಂಗಳೂರು: ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ.
ಪದವಿ ತರಗತಿಗಳಿಗೆ ಜುಲೈ 11 ಸೋಮವಾರದಿಂದ ಪ್ರವೇಶಾತಿ ಆರಂಭವಾಗಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ.
ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರ್‌ಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರ್‌ಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ.
ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು.
PublicNext
13/07/2022 08:25 pm