ತಾಲೂಕಿನಹುಲಿಕುಂಟೆ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಲ್ಟಿ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಕೆಐಎಡಿಬಿ ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಿದ ರೈತರು ಭೂ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಹುಲಿಕುಂಟೆ ಸುತ್ತಮುತ್ತಲಿ ಮಲ್ಟಿ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ 700 ಎಕರೆ ರೈತರ ಫಲವತ್ತಾದ ಜಮೀನು ಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳು ಗ್ರಾಮದ ಬೇಟೆ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ರೈತರಿಂದ ಆಕ್ಷೇಪಣ ಅರ್ಜಿ ಸ್ವೀಕರಿಸಿದರು. ಬಹುತೇಕ ರೈತರು ಭೂಸ್ವಾಧೀನ ವಿರೋಧಿಸಿ ಆಕ್ಷೇಪಣೆಗಳನ್ನು ಸಲ್ಲಿಸಿದರು.
ನೆಲಮಂಗಲ ತಾಲೂಕಿನ ಗೋರಘಟ್ಟ, ಮಾವಿನಕುಂಟೆ ಗ್ರಾಮ ವ್ಯಾಪ್ತಿಯ ಉದ್ದೇಶಿತ ಕೈಗಾರಿಕಾ ವಲಯಕ್ಕೆ ಹುಲಿಕುಂಟೆ ಗ್ರಾಮದ ಮೂಲಕವೇ ರಸ್ತೆ ಸಾಗಬೇಕಿದ್ದು, ರಸ್ತೆ ನಿರ್ಮಾಣಕ್ಕೆ ಮಾತ್ರ ಭೂಸ್ವಾಧೀನ ಮಾಡಿಕೊಳ್ಳಲು ಕೆಐಎಡಿಬಿ ಅಧಿಕಾರಿಗಳಿಗೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದರು. ರೈತರ ಪರವಾಗಿ ಮಾತನಾಡಿದ ಗ್ರಾಮದ ರಘು ರಂಗಸ್ವಾಮಿ, ಹುಲಿಕುಂಟೆ ಗ್ರಾಮದಲ್ಲಿ ಕೆಐಎಡಿಬಿ ಅಧಿಕಾರಿಗಳು ಗುರುತಿಸಿರುವ ಜಾಗ ಫಲವತ್ತಾದ ಕೃಷಿ ಭೂಮಿಯಾಗಿದೆ. ಇಲ್ಲಿನ ರೈತರು ಅಡಿಕೆ ಸೇರಿದಂತೆ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವ ಮುನ್ನ ಅಲ್ಲಿನ ಕೃಷಿ ಚಟುವಟಿಕೆಗಳನ್ನು ಪರಿಶೀಲಿಸಿದ ನಂತರವಷ್ಟೇ ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. 2013 ರಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತೋಟ, ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕು ಎಂದಿದೆ. ಆದರೆ, ಕೆಐಎಡಿಬಿ ಅಧಿಕಾರಿಗಳು ಹಳೆಯ ಸರ್ಕಾರಿ ದಾಖಲೆಗಳನ್ನು ಇಟ್ಟುಕೊಂಡು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ ಎಂದು ದೂರಿದರು.
PublicNext
08/07/2022 07:11 pm