ಬೆಂಗಳೂರು: ನೈಋತ್ಯ ಮುಂಗಾರು ಚುರುಕೊಂಡಿದ್ದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮುಂದಿನ 4 ದಿನ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಜುಲೈ 5ರವರೆಗೆ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.
ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ:
ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ,ಕೊಪ್ಪಳ, ಬೆಳಗಾವಿ,ಹಾವೇರಿ, ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
02/07/2022 05:34 pm