ಬೆಂಗಳೂರು: ಮೈಸೂರು ದಸರಾ - 2022 ರ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿರುವ ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಬೆಂಗಳೂರು ನಗರಕ್ಕೆ ಆಗಮಿಸಿದರು.
ಇಂದಿನಿಂದ ಒಟ್ಟು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿಗಳು ಇಂದು ಬೆಳಿಗ್ಗೆ ಮೈಸೂರಿನಲ್ಲಿ ದಸರಾ ಉತ್ಸವವನ್ನು ಉದ್ಘಾಟಿಸಿದರು. ನಂತರ ಮೈಸೂರಿನಿಂದ ಧಾರವಾಡಕ್ಕೆ ಪ್ರಯಾಣಿಸಿ ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿ, ಧಾರವಾಡದಲ್ಲಿ ಐಐಟಿಯ ನೂತನ ಕ್ಯಾಂಪಸ್ ಉದ್ಘಾಟಿಸಿದರು.
ತದನಂತರ ಬೆಂಗಳೂರಿನಲ್ಲಿ ಅಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಇಂದು ಸಂಜೆ ಧಾರವಾಡದಿಂದ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಸೇನೆಯಿಂದ ಗೌರವ ವಂದನೆ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಹಲವರು ಉಪಸ್ಥಿತರಿದ್ದರು.
Kshetra Samachara
26/09/2022 09:35 pm