ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆ.ಎಸ್‌.ಈಶ್ವರಪ್ಪ ಬಂಧನ, ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ‌ ಸಚಿವ ಕೆ.ಎಸ್.ಈಶ್ವರಪ್ಪ ಬಂಧನ ಮತ್ತು ಬೆಲೆ ಏರಿಕೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್‌ಸಿ ರವಿ, ನಾರಾಯಣಸ್ವಾಮಿ, ಶಾಸಕ ವೆಂಕಟರಮಣಯ್ಯ ಭಾಗಿಯಾಗಿದ್ದರು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್‌ಸಿ ಸಲೀಂ ಅಹಮದ್‌, ಬೆಲೆ ಏರಿಕೆ ನಿಯಂತ್ರಿಸುವಲ್ಲಿ‌ ಕೇಂದ್ರ ಸರಕಾರ ವಿಫಲವಾಗಿದೆ. ರಾಜ್ಯದಲ್ಲಿರುವ ಶೇ 40 ಪರ್ಸೆಂಟ್ ಸರಕಾರವನ್ನು ಕಿತ್ತೊಗೆಯಬೇಕು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿಗೆ ಕಮಿಷನ್ ಬಗ್ಗೆ‌ ಪತ್ರ ಬರೆದು ವರ್ಷ ಕಳೆದರೂ ಕ್ರಮ ಕೈಗೊಂಡಿಲ್ಲ. ವಿಧಾನಸಭೆಯಲ್ಲೂ ಇದರ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿಲ್ಲ. ಸರಕಾರದ ಸಚಿವರ ಕಿರುಕುಳದಿಂದಾಗಿ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು. ಇದೊಂದು‌ ನಿರ್ಜೀವ ಸರಕಾರ ಎಂದು‌ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಥಳಿ ನಡೆಸಿದರು. ಈಶ್ವರಪ್ಪ ವಿರುದ್ದ ಭ್ರಷ್ಟಾಚಾರ‌ ಪ್ರತಿಬಂಧಕ ಕಾಯ್ದೆಯಡಿ ದೂರು ದಾಖಲಿಸಿ, ಬಂಧಿಸಬೇಕು. ಸಂತೋಷ್ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.

ಈಶ್ವರಪ್ಪ ಬಂಧನ ಹಾಗೂ ಬೆಲೆ ಏರಿಕೆ ವಿಷಯವನ್ನು ‌ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯವ್ಯಾಪಿ ಹೋರಾಟ ರೂಪಿಸಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಒಬ್ಬೊಬ್ಬ ರಾಜ್ಯ ನಾಯಕರಿಗೆ ಉಸ್ತುವಾರಿ ನೀಡಲಾಗಿತ್ತು. ಆದರೆ ದೊಡ್ಡಬಳ್ಳಾಪುರದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಮಾತ್ರ ಜನರ ಕೊರತೆ ಎದುರಾಗಿತ್ತು. ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿತ್ತು. ಆದರೆ ಇಲ್ಲಿ ಮಾತ್ರ ಕಡಿಮೆ ಜನರಿದ್ದರು. ಇದು ಪಕ್ಷದ‌ ಮುಖಂಡರಿಗೆ ಇರಿಸುಮುರಿಸು ತಂದಿತ್ತು.

ಪ್ರತಿಭಟನೆಯಲ್ಲಿ ಶಾಸಕ ವೆಂಕಟರಮಣಯ್ಯ, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಪಕ್ಷದ ಮುಖಂಡರು ಭಾಗಿಯಾಗಿದ್ದರು.

Edited By : Shivu K
Kshetra Samachara

Kshetra Samachara

21/04/2022 07:58 am

Cinque Terre

5.76 K

Cinque Terre

0

ಸಂಬಂಧಿತ ಸುದ್ದಿ