ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಸಿದ್ಧತೆ ಬಗ್ಗೆ ರಾಜ್ಯ ನಾಯಕರ ಜೊತೆ ಅಮಿತ್ ಶಾ ಮಹತ್ವದ ಚರ್ಚೆ ನಡೆಸಿದ್ದು, ಇಂದು ಖಾಸಗಿ ಹೋಟೆಲ್ ನಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಅಮಿತ್ ಶಾ ಪಕ್ಷ ಸಂಘಟನೆ, ಕ್ಷೇತ್ರಗಳಲ್ಲಿನ ಸ್ಥಿತಿಗತಿ, ಹಾಲಿ ಶಾಸಕರ ಬಗ್ಗೆ ಜನರ ಅಭಿಪ್ರಾಯ ಸೇರಿದಂತೆ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಇದರ ಜೊತೆ ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನ ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ರಾಜ್ಯ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧರಾಗಿ ಎಂದಿದ್ದಾರೆ.
ಅಲ್ಲದೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಹಿಂದೂಪರ ಸಂಘಟನೆ ಮುಖಂಡರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಜೊತೆಗೆ ಇತರ ಕೋಮಿನ ರಾಜಕೀಯ ಕಾರಣದ ಹತ್ಯೆಗಳನ್ನೂ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು, ಚುನಾವಣಾ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ವಿಚಾರ ಬಹಳ ಮುಖ್ಯವಾಗಿರಲಿದೆ ಎಂದಿದ್ದರಂತೆ.
Kshetra Samachara
04/08/2022 07:24 pm