ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿದ್ಯುತ್‌ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ : ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ವಿದ್ಯುತ್‌ ಶುಲ್ಕ ಪಾವತಿಗೆ ಬಿಲ್‌ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್‌ ಗೆ ಬೆಸ್ಕಾಂ ವಿದ್ಯುತ್‌ ಶುಲ್ಕವನ್ನು ಸಂಗ್ರಹಿಸುತ್ತಿದ್ದು , ಬಿಲ್‌ ವಿತರಿಸಿದ ದಿನದಿಂದ ಅದರ ಪಾವತಿಗೆ 15 ದಿನಗಳ ಕಾಲಾವಕಾಶವಿರುತ್ತದೆ. ಜತೆಗೆ ಗ್ರಾಹಕರಿಗೆ ನೀಡುವ ಮಾಸಿಕ ಬಿಲ್‌ ನ ಹಿಂಬದಿ ಸೂಚನೆ 1 ರಲ್ಲಿ ಬಿಲ್‌ ಪಾವತಿಸಲು ಅಂತಿಮ ಗಡವು, ಬಿಲ್‌ ವಿತರಿಸಿದ ದಿನದಿಂದ 15 ದಿನಗಳ ಅವಧಿಯಾಗಿರುತ್ತದೆ ಎಂದು ನಮೂದಿಸಲಾಗಿದೆ.

ಗ್ರಾಹಕರು ನಿಗದಿತ ಅವದಿಯೊಳಗೆ ಹಣ ಪಾವತಿ ಮಾಡದಿದ್ದಲ್ಲಿ , ಗಡುವು ದಿನಾಂಕದ ನಂತರ 15 ದಿನಗಳ ಕಾಲಾವಧಿಯ ನೋಟಿಸ್‌ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುವ ಅಧಿಕಾರವನ್ನು ಬೆಸ್ಕಾಂ ಹೊಂದಿರುತ್ತದೆ ಎಂದು ಬೆಸ್ಕಾಂನ ನಿರ್ದೇಶಕರು (ಹಣಕಾಸು) ತಿಳಿಸಿದ್ದಾರೆ.

ಬಿಲ್‌ ವಿತರಿಸಿದ ದಿನಾಂಕದಿಂದ 15 ದಿನಗಳೊಳಗೆ ಬಿಲ್‌ ನ ಮೊತ್ತವನ್ನು ಗ್ರಾಹಕರು ಬೆಸ್ಕಾಂ ಸೂಚಿಸಿರುವ ಪಾವತಿ ಕೇಂದ್ರ,ಗಳಾದ ಬೆಂಗಳೂರು ಒನ್ , ಬೆಸ್ಕಾಂ ಮಿತ್ರ ಆ್ಯಪ್ , ಹತ್ತಿರದ ಬೆಸ್ಕಾಂ ಕಚೇರಿ, ಬೆಸ್ಕಾಂ ವೆಬ್ ಸೈಟ್ ಮತ್ತು ಗೂಗಲ್ ಆ್ಯಪ್ ಗಳಲ್ಲಿ ಮಾತ್ರ ಪಾವತಿಸಬಹುದಾಗಿದೆ.

ಇಲೆಕ್ಟ್ರಿಸಿಟಿ ಕಾಯ್ದೆ ಕುರಿತಂತೆ ಜನರಿಗೆ ದಾರಿ ತಪ್ಪಿಸುವ ಮಾಹಿತಿ ನೀಡಿ, ವಿದ್ಯುತ್‌ ಬಿಲ್‌ ಪಾವತಿಸಲು 6 ತಿಂಗಳ ಕಾಲವಿರುತ್ತದೆ. ಒಂದು ವೇಳೆ 6 ತಿಂಗಳ ನಂತರ ಬಿಲ್‌ ಕಟ್ಟದಿದ್ದ ಪಕ್ಷದಲ್ಲಿ ಬೆಸ್ಕಾಂ ಜಾಗೃತದಳ ಬಿಲ್‌ ಪಾವತಿಸುವಂತೆ 15 ದಿನಗಳ ಕಾಲ ಅವಧಿಯ ನೋಟಿಸ್‌ ನೀಡುತ್ತದೆ ಎಂಬ ಸುಳ್ಳು ಮಾಹಿತಿಯನ್ನು ವ್ಯಕ್ತಿಯೋರ್ವ ಕೆಲವು ದಿನಗಳ ಹಿಂದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ಕುರಿತು ಬೆಸ್ಕಾಂ ಜಾಗೃತದಳಕ್ಕೆ ಮಾಹಿತಿ ನೀಡಿದ್ದು, ಆತನ ವಿರುದ್ದು ಕಾನೂನು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ.

ಇಂತಹ ವದಂತಿ ಬಗ್ಗೆ ಕಿವಿಗೊಡಬೇಡಿ, ಇಂತಹ ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಮಾಹಿತಿ ಇದ್ದಲ್ಲಿ, ಬೆಸ್ಕಾಂನ ಅಧೀಕ್ಷಕರು , ಜಾಗೃತದಳ ಇವರ ದೂರವಾಣಿ ಸಂಖ್ಯೆ- 9448042375ಗೆ ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್‌ , ಜಾಗೃತದಳ ಇವರ ದೂರವಾಣಿ ಸಂಖ್ಯೆ- 9448094802ಗೆ ಕರೆ ಮಾಡಲು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ.

Edited By : PublicNext Desk
Kshetra Samachara

Kshetra Samachara

07/07/2022 05:47 pm

Cinque Terre

2.68 K

Cinque Terre

0

ಸಂಬಂಧಿತ ಸುದ್ದಿ