ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ಮತ್ತೊಮ್ಮೆ ಮುಂದೂಡಿದೆ.
ನಟಿ ರಾಗಿಣಿ ದ್ವಿವೇದಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ ಲೂತ್ರಾ, ನಟಿ ರಾಗಿಣಿ ವಿಚಾರಣೆಯನ್ನು ಸಿಸಿಬಿ ಪೊಲೀಸರು ಮುಗಿಸಿದ್ದಾರೆ.
ನಟಿ ಅನಾರೋಗ್ಯದಿಂದ ಬಳಲುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ತನಿಖಾಧಿಕಾರಿಗಳಿಗೆ ನಮ್ಮ ಕಕ್ಷಿದಾರೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಹೀಗಾಗಿ ಜಾಮೀನು ನಿರಾಕರಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ರದ್ದು ಪಡಿಸಿ ಜಾಮೀನು ನೀಡುವಂತೆ ಕೋರಿದ್ದಾರೆ.
ವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾ. ಆರ್.ಎಫ್. ನಾರಿಮನ್, ಸರ್ಕಾರದ ಪರವಾಗಿ ಪ್ರತಿನಿಧಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದರು. ಅರ್ಜಿಯ ವಿಚಾರಣೆಯನ್ನು ಜನವರಿ 19 ಕ್ಕೆ ಮುಂದೂಡಿ ನ್ಯಾಯಮೂರ್ತಿಗಳು ಆದೇಶಿಸಿದರು.
ಗಾಂಜಾ ಮತ್ತು ಇತರೆ ಮಾದಕ ವಸ್ತು ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ನಟಿಯನ್ನು ಬಂಧಿಸಿದ್ದರು.
PublicNext
13/01/2021 11:11 am