ಪಾಟ್ನಾ: ಕೆಲವು ಸಂದರ್ಭಗಳಲ್ಲಿ ಪೊಲೀಸರ ನಡೆ ಕೆಲವು ಅನುಮಾನಗಳು ಹುಟ್ಟಿಕೊಳ್ಳುವಂತೆ ಮಾಡುತ್ತವೆ.ಸದ್ಯ ಬಿಹಾರದ ಗಯಾ ಜಿಲ್ಲೆಯಲ್ಲಿ ಪೊಲೀಸರು ಮಹಿಳೆಯರು ಸೇರಿದಂತೆ ಕೆಲವರನ್ನು ವಶಕ್ಕೆ ತೆಗೆದುಕೊಂಡ ನಂತರ ಅವರ ಕೈಗಳಿಗೆ ಕೋಳ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಯಾ ಜಿಲ್ಲೆಯ ಬೆಳಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಿಗಾರಿಕೆ ಪ್ರದೇಶ ಗುರುತಿಸುವ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಮಹಿಳೆಯರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ, ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಕೆಲವು ಮಹಿಳೆಯರು ಸೇರಿದಂತೆ ಒಟ್ಟು 10 ಜನರನ್ನು ಬಂಧಿಸಲಾಗಿದೆ ಎಂದು ಗಯಾ ನಗರ ಎಸ್ಪಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಮತ್ತೊಂದೆಡೆ, ಮಳೆಗಾಲದಲ್ಲಿ ನದಿಯ ನೀರು ಗ್ರಾಮಕ್ಕೆ ನುಗ್ಗಿದ್ದರಿಂದ ಮರಳು ಘಾಟಿಯಲ್ಲಿ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅದೇನೆ ಇರಲಿ ಮಹಿಳೆಯರ ಕೈಕೋಳ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
PublicNext
18/02/2022 11:42 am