ಶಿವಮೊಗ್ಗ: ನಗರದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ನಿನ್ನೆ ಕೆಲ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಸುದ್ದಿ ಮಲೆನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ಕೊಲೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಎಸ್ಪಿ ಲಕ್ಷ್ಮಿಪ್ರಸಾದ್ ಮತ್ತು ಡಿಸಿ ಡಾ. ಸೆಲ್ವಮಣಿ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಸೂಕ್ಷ್ಮಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಇದೇ ವೇಳೆ ಮಾತನಾಡಿದ ಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡರು.
ನಿನ್ನೆ ರಾತ್ರಿ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅಲರ್ಟ್ ಆದರು. ಉದ್ವಿಗ್ನಗೊಂಡ ಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮೊದಲೇ ಹಿಜಾಬ್ ವಿವಾದದ ಮೂಲಕ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಈ ನಡುವೆ ಬಜರಂಗದಳದ ಕಾರ್ಯಕರ್ತನ ಕಗ್ಗೊಲೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ.
PublicNext
21/02/2022 08:07 am