ಮುಂಬೈ: ಸುಲಿಗೆ ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್, ಐಪಿಎಸ್ ಅಧಿಕಾರಿ, ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ’ ಎಂದು ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಘೋಷಿಸಿದೆ.
ನಗರದ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್ ಸಚಿನ್ ವಾಜೆ ಕೂಡ ಆರೋಪಿಯಾಗಿದ್ದಾರೆ. ಸಿಂಗ್ ಅಲ್ಲದೆ, ಸಹ ಆರೋಪಿಗಳಾದ ವಿನಯ್ ಸಿಂಗ್ ಮತ್ತು ರಿಯಾಜ್ ಭಟ್ಟಿ ಘೋಷಿತ ಅಪರಾಧಿಗಳೆಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್. ಬಿ. ಭಾಜಿಪಾಲೆ ಅವರು ಘೋಷಿಸಿದ್ದಾರೆ.
ತಲೆಮರೆಸಿಕೊಂಡಿರುವ ಪರಮ್ ಬೀರ್ ಸಿಂಗ್ ವಿರುದ್ಧ ಈಗಾಗಲೇ ಮೂರು ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ. ಹೀಗಿದ್ದರೂ ಕೋರ್ಟ್‌ಗೆ ಹಾಜರಾಗಿಲ್ಲ. ಇನ್ನು 30 ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.
ಏನಿದು ಪ್ರಕರಣ?: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು. ಈ ಸಂಬಂಧ ಜುಲೈ 23 ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.
PublicNext
18/11/2021 12:29 pm