ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಉತ್ತಮ ಆಡಳಿತ ದಿನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ವೇಳೆ ‘ಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆ’ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು, ''ರಾಜ್ಯದ ಎಲ್ಲಾ ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.
ಡಿಜಿಟಲ್ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರ್ಕಾರಿ ಎಂಜನಿಯರಿಂಗ್ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ಟ್ಯಾಬ್ಲೆಟ್ ಬೆಲೆ 10 ಸಾವಿರ ರೂ. ಆಗಿದ್ದು, 1.55 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 155.4 ಕೋಟಿ ರೂ. ವೆಚ್ಚವಾಗಲಿದೆ. ಒಂದು ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಟ್ಯಾಬ್‌ಗಳು ಪೂರಕವಾಗದಿದ್ದರೆ ಲ್ಯಾಪ್‌ಟಾಪ್ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
PublicNext
26/12/2020 11:54 am