ಚಿತ್ರದುರ್ಗ : ಇದೇ ಆಗಸ್ಟ್ 22 ರಂದು ನಡೆಯುವ ಕರ್ನಾಟಕ ಶಿಕ್ಷಕರ ಆರ್ಹತಾ ಪರೀಕ್ಷೆಯನ್ನು ಯಾವುದೇ ತೊಂದರೆಯಾಗದಂತೆ ಅದಷ್ಟು ಜಾಗರೂಕತೆ ವಹಿಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಶಿಕ್ಷಕರ ಆರ್ಹತಾ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಹಂಚುವ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಯ ಮೇಲ್ವೀಚಾರಕರು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವನ್ನು ಅನುಸರಿಸಬೇಕು ಎಂದು ಹೇಳಿದರು. ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಬೇಕು. ಸೋಂಕು ದೃಢಪಟ್ಟ ಪ್ರಕರಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಹಾಗೂ ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗುವ ಮುನ್ನ ಪ್ರತ್ಯೇಕ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಬರುವಂತೆ ಸೂಚಿಸಬೇಕು ಎಂದು ಹೇಳಿದರು.
ಶಾಲೆಗಳು ಆರಂಭ ಹಿನ್ನೆಲೆ ಅಗತ್ಯ ಕ್ರಮ: ಆಗಸ್ಟ್ 23 ರಿಂದ ಪ್ರೌಢಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 486 ಪ್ರೌಢಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು. ಶಾಲೆ ಆರಂಭವಾದ ವಿದ್ಯಾರ್ಥಿಗಳು ಶಾಲೆಗೆ ಆಗಮಿಸುವುದಕ್ಕಿಂತ ಮುಂಚಿತವಾಗಿ ಶಾಲಾ ಆವರಣ ಸ್ವಚ್ಛವಾಗಿರಬೇಕು ಹಾಗೂ ಆರೋಗ್ಯಕಾರ ವಾತವರಣ ನಿರ್ಮಾಣ ಮಾಡಬೇಕು ಇದು ಪ್ರತಿಯೊಬ್ಬ ಶಾಲಾ ಮುಖೋಪಾಧ್ಯಯರ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.
2 ವರ್ಷದ ನಂತರ ವಿದ್ಯಾರ್ಥಿಗಳು ಶಾಲೆಗೆ ಆಗಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಲೆಗೆ ಬರುವ ಮುನ್ನ ಶಾಲೆಯ ತರಗತಿ ಕೊಠಡಿಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಸೌಕರ್ಯ, ಶೌಚಾಲಯ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಮುಖೋಪಾಧ್ಯಯರು ಹೆಚ್ಚು ಗಮನಹರಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಮಾತನಾಡಿ ಆಗಸ್ಟ್ 22 ರಂದು ನಡೆಯುವ ಕರ್ನಾಟಕ ಶಿಕ್ಷಕರ ಆರ್ಹತಾ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9970 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅದರಲ್ಲಿ ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 3681 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರರೆಗೆ ನಡೆಯುವ 2ನೇ ಅಧಿವೇಶನದಲ್ಲಿ 6289 ಅಭ್ಯರ್ಥಿಗಳು ಸೇರಿದಂತೆ ಒಟ್ಟು 9970 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದರೆ ಎಂದು ಹೇಳಿದರು.
ಚಿತ್ರದುರ್ಗದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿ ಮಾಡುವಂತೆ ಹಾಗೂ ಪರೀಕ್ಷೆ ಕೇಂದ್ರಗಳಲ್ಲಿ ಪ್ರತಿ ಕೆಂದ್ರಕ್ಕೆ ಇಬ್ಬರಂತೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಹಾಗೂ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಸಹಾಯಕರನ್ನು ನಿಯೋಜಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಜಿಲ್ಲಾ ಖಜಾನೆಯ ಉಪನಿರ್ದೇಶಕ ರಾಜಣ್ಣ, ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, 25 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
19/08/2021 07:27 pm