ಬೆಂಗಳೂರು: ರಾಜ್ಯದಲ್ಲಿ ಜೂನ್ 16 ಮತ್ತು 17ರಂದು ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮವನ್ನು ಪ್ರತಿನಿಧಿಸುವ ಬಟ್ಟೆ ಸೇರಿದಂತೆ ಕಿವಿ ಮತ್ತು ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಈ ಸಂಬಂಧ ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಭೆ ನಡೆದಿದ್ದು ಧರ್ಮವನ್ನು ಪ್ರತಿನಿಧಿಸುವಂತಹ ಕೇಸರಿ ಶಾಲ್, ಹಿಜಾಬ್ ಹಾಗೂ ಶರ್ಟ್‌ಗಳನ್ನು ಧರಿಸುವಂತಿಲ್ಲ. ಅಲ್ಲದೇ ಯಾವುದೇ ರೀತಿಯ ಆಭರಣಗಳನ್ನು ಧರಿಸಿಕೊಂಡು ಬರದಂತೆ ಕ್ರಮವಹಿಸಲು ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರಿಗೆ ಸೂಚಿಸಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸರ್ಜಿಕಲ್ ಮಾಸ್ಕ ಬಳಸುವಂತೆ ಕ್ರಮವಹಿಸಲು ತಿಳಿಸಲಾಗಿದೆ.
ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ರೀತಿಯ ಕೈಗಡಿಯಾರ ಕಟ್ಟಿಕೊಂಡು ಅಥವಾ ತೆಗೆದುಕೊಂಡು ಬರದಂತೆ ಸೂಕ್ತ ಕ್ರಮಜರುಗಿಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ತರಬೇಕು. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಮೊಬೈಲ್, ಪೇಜರ್, ಬ್ಲೂಟೂತ್ ಸೇರಿದಂತೆ ಇನ್ನಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರದಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ.
ಜೂನ್ 16ರಂದು ಬೆಳಿಗ್ಗೆ 10.30 ರಿಂದ 11.50 ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ವರೆಗೆ ಗಣಿತ ವಿಷಯ ಪರೀಕ್ಷೆಗಳು ನಡೆಯಲಿವೆ. ಜೂನ್ 17 ರಂದು ಬೆಳಿಗ್ಗೆ 10.30 ರಿಂದ 11.50 ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ವರೆಗೆ ರಸಾಯನಶಾಸ್ತ್ರ ವಿಷಯ ಪರೀಕ್ಷೆ ನಡೆಯಲಿವೆ.
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ನಗರದಲ್ಲಿ 7, ಜಮಖಂಡಿ ನಗರದಲ್ಲಿ 4 ಸೇರಿ ಒಟ್ಟು 11 ಪರೀಕ್ಷಾ ಕೇಂದ್ರಗಳಿದ್ದು, 6264 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆ ನಗರದಲ್ಲಿ 3960 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರೆ, ಜಮಖಂಡಿ ನಗರದಲ್ಲಿ 2304 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಪೊಲೀಸ್ ಬಂದೋಬಸ್ತ ಹಾಗೂ ಎಸ್ಕಾಟ್ ವ್ಯವಸ್ಥೆ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ 200 ಮೀಟರ್ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇಲಾಖೆಯಿಂದ ಈಗಾಗಲೇ ನೇಮಕಗೊಂಡ ಅಧಿಕಾರಿಗಳು ಕಟ್ಟುನಿಟ್ಟಾಗಿ ಪರೀಕ್ಷಾ ನಿಯಮಗಳನ್ನು ಪಾಲಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು. ಬಾಗಲಕೋಟೆ ಮತ್ತು ಜಮಖಂಡಿ ನಗರದ ಪರೀಕ್ಷಾ ಕೇಂದ್ರಗಳಿಗೆ ತಲಾ ಎರಡು ಪ್ರತ್ಯೇಕವಾದ ಪ್ರಶ್ನೆ ಪತ್ರಿಕೆ ಸ್ವೀಕೃತಿ ಹಾಗೂ ವಿತರಣೆಗೆ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡ ಉಪಮುಖ್ಯ ಅಧೀಕ್ಷಕರು, ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು ಹಾಗೂ ತ್ರಿಸದಸ್ಯ ಸಮಿತಿ ಅಧಿಕಾರಿಗಳ ತಂಡದವರು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಲು ಅಲ್ಲಿನ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
PublicNext
11/06/2022 10:14 am