ಗದಗ: ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳೊಂದಿಗೆ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಉತ್ತಮ ಚಿಕಿತ್ಸೆ ಒದಗಿಸುವುದು ಆರೋಗ್ಯ ಕೇಂದ್ರಗಳ ಮುಖ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬುಧವಾರ ಜರುಗಿದ ಕಾಯಕಲ್ಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇಂದಿನ ದಿನಮಾನಕ್ಕೆ ತಕ್ಕಂತೆ ಬದಲಾವಣೆ ಮಾಡುವದು ಅವಶ್ಯಕವಾಗಿದೆ.
ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿರುವ ತಾವೆಲ್ಲರು ಪ್ರಾಮಾಣಿಕವಾಗಿ ಸೇವೆ ನೀಡಬೇಕು.ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸರ್ಕಾರಿ ಆಸ್ಪತ್ರಗಳನ್ನು ಉನ್ನತ ಆಸ್ಪತ್ರೆಯನ್ನಾಗಿಸಲು ಮುಂದಾಗುವಂತೆ ಕರೆ ನೀಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಿ.ಎಸ್.ಪಲ್ಲೇದ ಸೇರಿದಂತೆ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ ವಾಯ್.ಕೆ.ಭಜಂತ್ರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್, ಆರ್.ಸಿ.ಎಚ್. ಅಧಿಕಾರಿ ಡಾ. ಬಿ.ಎಂ. ಗೊಜನೂರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಎಸ್.ಎಸ್. ನೀಲಗುಂದ,ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಆರ್.ಸಿ. ಬಸರಿಗಿಡದ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕೆ, ಜಿಮ್ಸ ವೈದ್ಯಕೀಯ ಅಧೀಕ್ಷಕ ರಾಜಶೇಖರ ಮ್ಯಾಗೇರಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
Kshetra Samachara
21/09/2022 08:04 pm