ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿ ಸಿಎಂ, "ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡೆ. ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದರು.
ಗೋ ಸಂಪತ್ತಿನ ರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭ, ಗೋ ಉತ್ಪನ್ನಗಳ ಮಾರಾಟಕ್ಕಾಗಿ ಗೋ ಮಾತಾ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶುವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಂದಿನಿ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕ್‌ಅನ್ನು ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲಾಗುತ್ತಿದೆ. 3,600 ಕೋಟಿ ರೂ.ಗಳ ಬಂಡವಾಳದಿಂದ ಹಾಲು ಉತ್ಪಾದಿಸುವ ರೈತರಿಗೆ ಸುಲಭ ದರದಲ್ಲಿ ಸಾಲ ನೀಡುವ ಮೂಲಕ ಆರ್ಥಿಕ ಅಭಿವೃದ್ದಿಗೊಳಿಸಲಾಗುವುದು. ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಆಗಲಿದೆ ಎಂದು ತಿಳಿಸಿದರು.
PublicNext
08/05/2022 01:20 pm