ಹುಬ್ಬಳ್ಳಿ: ಗ್ರಾಪಂ ಸದಸ್ಯ ದೀಪಕ್ ಪಟದಾರಿ ಕೊಲೆ ಕೇಸ್ ಕುರಿತು ಈಗಾಗಲೇ ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದೇ ತಡ ಸಿಐಡಿ ಅಧಿಕಾರಿಗಳು ತನಿಖೆ ಆರಂಭಗೊಳಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಈಗಾಗಲೇ ಮಾಹಿತಿ ಸಂಗ್ರಹ ಹಾಗೂ ಕೊಲೆಯ ತನಿಖೆ ನಡೆಸುತ್ತಿದ್ದಾರೆ.
ಹೌದು..ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು, ಕಳೆದ ಜುಲೈ 4ರಂದು ನಡೆದಿದ್ದ ಗ್ರಾಪಂ ಸದಸ್ಯ ದೀಪಕ್ ಪಟದಾರಿ ಹತ್ಯೆಯ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಹುಬ್ಬಳ್ಳಿಯ ರಾಯನಾಳ ಬಳಿ ದೀಪಕ್ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಪೊಲೀಸರ ಮೇಲೆ ಅನುಮಾನ ವ್ಯಕ್ತವಾಗಿತ್ತು. ಪ್ರಕರಣ ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ ತನಿಖೆಯನ್ನು ಸಿಐಡಿಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಪ್ರಕರಣ ತನಿಖೆ ಸಿಐಡಿಗೆ ನೀಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಪ್ರಕರಣವನ್ನ ಕಳೆದ ಎರಡು ದಿನಗಳ ಹಿಂದೆ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಸಿಐಡಿ ಅಧಿಕಾರಿಗಳಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಒಟ್ಟು ಆರು ಜನರ ತಂಡದಿಂದ ಕೊಲೆ ಪ್ರಕರಣದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಇಬ್ಬರು DYSP ಅಧಿಕಾರಿಗಳ ನೇತೃತ್ವದಲ್ಲಿ ಮಾಹಿತಿ ಸಂಗ್ರಹ ಕಾರ್ಯ ಮುಂದುವರೆದಿದೆ.
Kshetra Samachara
23/09/2022 06:18 pm