ಧಾರವಾಡ: ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಲು ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡುವುದು ಮುಖ್ಯವಾಗಿದೆ ಎಂದು ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ನಾಗಶ್ರೀ ಹೇಳಿದರು.
ಧಾರವಾಡದ ಸಿಡಿ ಆವರಣದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಧಾರವಾಡ ವಕೀಲರ ಸಂಘ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಪಾಲಕರು, ಪೋಷಕರು ಮಕ್ಕಳ ಮೇಲಿನ ಅತಿಯಾದ ಪ್ರೀತಿಯಿಂದ ಹೆಚ್ಚು ಸ್ವಾತಂತ್ರ್ಯ ನೀಡುತ್ತಾರೆ. ಕಾಲಕಾಲಕ್ಕೆ ಮಕ್ಕಳಿಗೆ ಅಗತ್ಯವಿರುವ ಮಾರ್ಗದರ್ಶನ, ಜೀವನ ಮೌಲ್ಯ ತಿಳಿಸುವಲ್ಲಿ ವಿಮುಖರಾಗುತ್ತಾರೆ ಎಂದರು.
ಮನುಷ್ಯರಲ್ಲಿ ಸಕಾರಾತ್ಮಕ ಚಿಂತನೆಗಳಿಗಿಂತ ನಕಾರಾತ್ಮಕ ಭಾವನೆಗಳು ಹೆಚ್ಚುವುದರಿಂದ ವಿಕೃತ ಮನೋಭಾವ ಸೃಷ್ಟಿಯಾಗುತ್ತದೆ. ಇದರಿಂದ ಅಪರಾಧ ಕೃತ್ಯ, ಅಸಮಾಧಾನ, ವೈರತ್ವ ಹೆಚ್ಚುತ್ತದೆ. ಮತ್ತು ಮಾನವನ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಲ್ಲೂ ಮನುಷ್ಯತ್ವ ಪ್ರೀತಿಸುವ ಮನೋಭಾವ ಬೆಳೆಯಬೇಕು. ಪರಸ್ಪರರಲ್ಲಿ ಸಮಾನತೆ, ಗೌರವ ಮೂಡಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾನವ ಹಕ್ಕುಗಳ ಸಂರಕ್ಷಣೆ ಕುರಿತು ಸಭಿಕರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ಧಾರವಾಡ ನ್ಯಾಯವಾದಿ ಕೆ.ಬಿ. ನಾವಲಗಿಮಠ ಅವರು ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಂ., ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ.ಬಿ., ಧಾರವಾಡ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಘೋಡಸೆ, ಕೆಸಿಡಿ ಪ್ರಾಚಾರ್ಯ ಡಾ.ಡಿ.ಬಿ. ಕರಡೋಣಿ ಪಾಲ್ಗೊಂಡಿದ್ದರು.
Kshetra Samachara
10/12/2021 10:23 pm