ಧಾರವಾಡ: ಸದೃಢ, ಸುಸಂಸ್ಕೃತ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರತಿಯೊಬ್ಬ ಶಿಕ್ಷಕರು ಸಮರ್ಪಣಾ ಭಾವದಿಂದ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಶಿಕ್ಷಕರ ದಿನೋತ್ಸವ ಸಮಿತಿಯ ಸಂಯುಕ್ತವಾಗಿ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಧಕ ಶಿಕ್ಷಕರನ್ನು ಒಂದೆಡೆ ಸೇರುವ ಸುಸಂದರ್ಭ ಸೃಷ್ಠಿ ಮಾಡಿದ ಕೀರ್ತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಸಲ್ಲುತ್ತದೆ. ಭಾರತದ ಶೈಕ್ಷಣಿಕ ಚರಿತ್ರೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್, ಮಾತೆ ಸಾವಿತ್ರಿಬಾಯಿ ಪುಲೆ ಮತ್ತು ಪಾತಿಮಾ ಅವರು ಹೆಸರು ಚಿರಾಯುವಾಗಿದೆ.
ಶಿಕ್ಷಕ ವೃತ್ತಿ ಶ್ರೇಷ್ಠ ವಾದದ್ದು. ಸದೃಡ, ಸುಸಂಸ್ಕೃತ ರಾಷ್ಟ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವೃತ್ತಿಗೆ ಕಳಂಕ ಬರದಂತೆ ಶಿಕ್ಷಕ ಸಮುದಾಯ ಸೇವೆ ಸಲ್ಲಿಸಬೇಕು ಎಂದು ಬಸವರಾಜ ಹೊರಟ್ಟಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಮಾತನಾಡಿ, ಶಿಕ್ಷಕರು ಸಮರ್ಪಣಾ ಭಾವದಿಂದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳನ್ನು ರಾಷ್ಟ್ರಕ್ಕೆ ಆದರ್ಶ ವ್ಯಕ್ತಿಯಾಗಿ, ಮಾದರಿ ನಾಗರಿಕರನ್ನಾಗಿ ರೂಪಿಸಿ ನೀಡಬೇಕು ಎಂದರು.
ಮುರಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
Kshetra Samachara
05/09/2022 08:53 pm