ಧಾರವಾಡ: ಜ. 26 ರಂದು ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವವನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮ ಆಯೋಜನೆಗೆ ವಿವಿಧ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವದ ನಿಮಿತ್ಯ ಜ. 25 ರಿಂದ 27 ರವರೆಗೆ ನಗರದ ಎಲ್ಲ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಜ.26 ರಂದು ಬೆಳಿಗ್ಗೆ 7-30 ಕ್ಕೆ ಎಲ್ಲ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8-30 ಕ್ಕೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಸಮಾವೇಶಗೊಳ್ಳಬೇಕು. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸುವರು. ಪೊಲೀಸ್ ಹಾಗೂ ವಿವಿಧ ದಳಗಳ ಸದಸ್ಯರು ಪಥ ಸಂಚಲನ ನಡೆಸಿ, ಗೌರವ ಸಲ್ಲಿಸುವರು.
ಕೋವಿಡ್ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಂದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಿಲ್ಲ, ಆದರೆ 10 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಲು ಇಚ್ಚಿಸಿದಲ್ಲಿ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾನೂನು ಸುವ್ಯವಸ್ಥೆ ವಿಭಾಗದ ಉಪಪೊಲೀಸ್ ಆಯುಕ್ತರ ಅಧ್ಯಕ್ಷತೆಯ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ, ಶಿಫಾರಸ್ಸು ಮಾಡುವ ಜಿಲ್ಲೆಯ ಐವರು ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಮಾಡಲಾಗುವುದು. ಮತ್ತು ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.
Kshetra Samachara
02/01/2021 05:51 pm