ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ

ಧಾರವಾಡ: ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷದಡಿ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅಳ್ನಾವರ ತಾಲೂಕಿನ ಕೋಗಿಲಗೇರಿ ಗ್ರಾಮದಲ್ಲಿ ಫೆ.20 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಮ್ಮಿಕೊಂಡಿದ್ದಾರೆ. ತಹಶೀಲ್ದಾರ ಅಮರೇಶ ಪಮ್ಮಾರ ಅವರು ಭಾಗವಹಿಸಲಿದ್ದಾರೆ.

ಅದೇ ದಿನ (ಫೆ.20) ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಅವರು ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಗ್ರಾಮದಲ್ಲಿ, ಕುಂದಗೋಳ ತಹಶೀಲ್ದಾರ ಬಸವರಾಜ ಮೆಳವಂಕಿ ಅವರು ತಾಲೂಕಿನ ಗುಡನಕಟ್ಟಿ ಗ್ರಾಮದಲ್ಲಿ, ನವಲಗುಂದ ತಹಶೀಲ್ದಾರ ನವೀನ ಹುಲ್ಲೂರ ಅವರು ತಾಲೂಕಿನ ಕುಮಾರಗೊಪ್ಪ ಗ್ರಾಮದಲ್ಲಿ, ಅಣ್ಣಿಗೇರಿ ತಹಶೀಲ್ದಾರ ಕೊಟ್ರೇಶ ಗಾಳಿ ಅವರು ತಾಲೂಕಿನ ತುಪ್ಪದಕುರಟ್ಟಿ ಗ್ರಾಮದಲ್ಲಿ, ಧಾರವಾಡ ತಹಶೀಲ್ದಾರ ಸಂತೋಷ ಬಿರಾದಾರ ಅವರು ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮತ್ತು ಕಲಘಟಗಿ ತಹಶೀಲ್ದಾರ ಅಶೋಕ ಶಿಗ್ಗಾಂವಿ ಅವರು ಶಿಗ್ಗನಹಳ್ಳಿ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮವಾಸ್ತವ್ಯದಲ್ಲಿನ ಕಾರ್ಯಗಳು: ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು.

ಆಧಾರ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವುದು, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗೃತೆ ಕ್ರಮವಹಿಸುವುದು.

ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ., ಎಸ್.ಟಿ., ಬಿ.ಸಿ.ಎಂ. ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು. ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು. ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಆದೇಶಿಸುವುದು, ಗುಡಿಸಲು ರಹಿತ ವಾಸದ ನಿರ್ಮಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನ ನೀಡುವುದು.

ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂದಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಈ ನೂತನ ಗ್ರಾಮವಾಸ್ತವ್ಯದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಿದೆ.

Edited By : Nirmala Aralikatti
Kshetra Samachara

Kshetra Samachara

17/02/2021 06:14 pm

Cinque Terre

16.39 K

Cinque Terre

1

ಸಂಬಂಧಿತ ಸುದ್ದಿ