ಧಾರವಾಡ: ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಜಿಲ್ಲೆಯ ಹಳ್ಳಿಯೊಂದರಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕಂದಾಯ ಇಲಾಖೆಯ ಸುತ್ತೋಲೆ ಇರುವುದರಿಂದ ನಾಳೆ ಅಳ್ನಾವರ ತಾಲೂಕಿನ ಕೋಗಿಲಗೇರಿ ಗ್ರಾಮದಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಗ್ರಾಮ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲಗೇರಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ನಮ್ಮೊಂದಿಗೆ ಜಿಲ್ಲಾ ಪಂಚಾಯ್ತಿ ಸಿಇಓ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮವನ್ನು ಸುತ್ತಾಡಿ ಆ ಗ್ರಾಮದಲ್ಲಿ ಎಲ್ಲೆಲ್ಲಿ ಏನೇನು ಸಮಸ್ಯೆ ಇದೆ. ಯಾವ ಕೆಲಸಗಳಾಗಬೇಕು? ಪಿಂಚಣಿ, ಪಹಣಿ ಸೇರಿದಂತೆ ಅನೇಕ ಕೆಲಸಗಳ ಬಗ್ಗೆ ಗ್ರಾಮದಲ್ಲೇ ಚರ್ಚೆ ಮಾಡಿ ಸ್ಥಳದಲ್ಲೇ ಅಂತವುಗಳನ್ನು ಬಗೆಹರಿಸುವ ಯೋಜನೆ ಇದಾಗಿದೆ ಎಂದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಘೋಷವಾಕ್ಯದಡಿ ಈ ಕಾರ್ಯಕ್ರಮ ನಡೆಯುತ್ತಿದೆ. ಜಿಲ್ಲೆಯ ಆಯಾ ತಾಲೂಕಿನ ತಹಶೀಲ್ದಾರರು ಒಂದೊಂದು ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದು, ಅವರು ಅಲ್ಲಿ ವಾಸ್ತವ್ಯ ಮಾಡಿ ಅಲ್ಲಿನ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಡಲಿದ್ದಾರೆ ಎಂದರು.
ಕೋಗಿಲಗೇರಿ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಮಾಡಿ ಅದೇ ದಿನ ಮುಂದಿನ ಯಾವ ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು ಎಂಬುದನ್ನು ಅಲ್ಲೇ ಘೋಷಣೆ ಮಾಡಲಾಗುವುದು ಎಂದು ಡಿಸಿ ನಿತೇಶ್ ಪಾಟೀಲ ಹೇಳಿದರು.
Kshetra Samachara
19/02/2021 07:50 pm