ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಗಳಿಗೆ 24X7 ಶುದ್ಧ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆಯ ಕಾಮಗಾರಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗಬಾರದು. ಎಲ್ ಅ್ಯಂಡ್ ಟಿ ಕಂಪನಿಯವರು ಅರ್ಹ ಹೊಸ ನೌಕರರನ್ನು ನೇಮಕ ಮಾಡಿಕೊಂಡು ಶೀಘ್ರಗತಿಯಲ್ಲಿ ಕಾಮಗಾರಿ ಮುಗಿಸಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟು ಮಾಡದೇ ನೀರು ಸರಬರಾಜು ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕು. 274 ಕೋಟಿ ರೂ. ವೆಚ್ಚದ ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಏ.26 ರೊಳಗೆ ಎಲ್ ಅಂಡ್ ಟಿ ಕಂಪನಿ ಅವರು ಕಾಮಗಾರಿಯನ್ನು ಹಸ್ತಾಂತರ ಮಾಡಿಕೊಳ್ಳಬೇಕು. ಏ.29 ರಂದು ಮತ್ತೆ ಸಭೆ ನಡೆಸಿ ಪರಿಶೀಲಿಸಲಾಗುವುದು. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಸಮಸ್ಯೆಗಳು ಉಲ್ಬಣವಾದರೆ ಅದನ್ನು ಚುನಾಯಿತ ಪ್ರತಿನಿಧಿಗಳು ಹಾಗೂ ಆಡಳಿತದ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.
ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ( ಬೈರತಿ) ಮಾತನಾಡಿ, ಬೆಂಗಳೂರು ಹೊರತುಪಡಿಸಿದರೆ ಹುಬ್ಬಳ್ಳಿ-ಧಾರವಾಡ ಅವಳಿನಗರ ರಾಜ್ಯದ ಎರಡನೇ ದೊಡ್ಡ ನಗರಗಳಾಗಿವೆ. ಶುದ್ಧ ಕುಡಿಯುವ ನೀರು ಪೂರೈಕೆ ಬಹಳ ಮುಖ್ಯ ಕಾರ್ಯವಾಗಿದೆ. ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ನೀರು ಸರಬರಾಜು ಮಾಡಲು ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಧಿಕಾರಿಗಳು ಕ್ರಮವಹಿಸಬೇಕು. ಜಾಕ್ ವೆಲ್ ಸಮಸ್ಯೆಯ ಕಾರಣವನ್ನು ಪುನರಾವರ್ತನೆ ಮಾಡದೇ, ಜನರಿಗೆ ನೀರು ಒದಗಿಸಲು ಆದ್ಯತೆ ನೀಡಬೇಕು. ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, 24*7 ಶುದ್ಧ ಕುಡಿಯುವ ನೀರು ದಿನನಿತ್ಯ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕು. ನೀರಿನ ಕರವನ್ನು ಯಾವುದೇ ಕಾರಣಕ್ಕೂ ಹೆಚ್ಚಿಸಬೇಡಿ. ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ವಿದ್ಯುತ್ ಪೂರೈಕೆಗೆ ಮುಂದಾಗಬೇಕು. ವಿದ್ಯುತ್ ಪಡೆಯಲು ಪರ್ಯಾಯ ಮಾರ್ಗಗಳನ್ನು ಅನುಸರಿಸಬೇಕು. ಸರಿಯಾಗಿ ಕೆಲಸ ಮಾಡದಿದ್ದರೆ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. 11 ವಾರ್ಡುಗಳಲ್ಲಿ ಕೆಯುಐಡಿಎಫ್ ಸಿಯಿಂದ ನೀರು ಒದಗಿಸಲಾಗುತ್ತಿದೆ. 25 ವಾರ್ಡುಗಳಿಗೆ ಜಲಮಂಡಳಿಯಿಂದ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉಳಿದ ವಾರ್ಡುಗಳಿಗೂ ನೀರು ಒದಗಿಸಬೇಕು. ಬೆಳಗಾವಿ ಮತ್ತು ಕಲಬುರ್ಗಿ ನಗರಗಳ ಮಾದರಿಯಲ್ಲಿ ಇಲ್ಲಿನ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದರು.
Kshetra Samachara
18/04/2022 05:47 pm