ಧಾರವಾಡ: ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ರೇಬಿಸ್ ಕುರಿತ ಮಾಹಿತಿ ಶಿಕ್ಷಣ ಸಂವಹನದ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.
ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪ್ರತಿವರ್ಷ ತಪ್ಪದೇ ರೇಬಿಸ್ ನಿರೋಧಕ ಲಸಿಕೆಯನ್ನು ಹಾಕಿಸಬೇಕು. ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಲಸಿಕೆ ಹಾಕುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ನೀಡಬೇಕೆಂದು ಅವರು ತಿಳಿಸಿದರು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ರೇಬಿಸ್ ನಿರೋಧಕ ಲಸಿಕೆ ಲಭ್ಯವಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹೆಚ್ಚಳದಿಂದಾಗಿ ವಿವಿಧ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ. ಮತ್ತು ನಾಯಿ-ಮಾನವ ಸಂಘರ್ಷಗಳು ಹೆಚ್ಚಾಗುತ್ತಿವೆ. ಬೀದಿ ನಾಯಿಗಳು ಮಕ್ಕಳ ಮೇಲೆ ಹಾಗೂ ಸಾರ್ವಜನಿಕರ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತದಿಂದ ಸಾಕುನಾಯಿ ದತ್ತು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈಗಾಗಲೇ ದತ್ತು ಕಾರ್ಯಕ್ರಮದ ಮೂಲಕ 25 ಕ್ಕೂ ಹೆಚ್ಚು ಬೀದಿ ನಾಯಿ ಮರಿಗಳನ್ನು ಆಸಕ್ತರಿಗೆ ದತ್ತು ನೀಡಿ, ಸಾಕಲು ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಮಹಾನಗರ ಹಾಗೂ ತಾಲ್ಲೂಕಾ ಕೇಂದ್ರಗಳಲ್ಲಿ ಸಾಕು ನಾಯಿ ದತ್ತು ಕಾರ್ಯಕ್ರಮವನ್ನು ಆಯೋಜಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಹೇಳಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ಕಾರ್ಯಕ್ರಮ ಅಧಿಕಾರಿ ಡಾ.ಸುಜಾತಾ ಹಸವಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಜನೇವರಿ 2022 ರಿಂದ ಆಗಸ್ಟ್‌ವರೆಗೆ ಸುಮಾರು 6 ತಿಂಗಳಲ್ಲಿ ಜಿಲ್ಲೆಯಲ್ಲಿ 5,126 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಆದರೆ ರೇಬಿಸ್ ಕುರಿತ ಯಾವ ಪ್ರಕರಣಗಳು ಕಂಡು ಬಂದಿಲ್ಲ. ಆರೋಗ್ಯ ಇಲಾಖೆಯಿಂದ ನಾಯಿಗಳ ಆರೋಗ್ಯ ಚಿಕಿತ್ಸೆ, ಸಾಮಾನ್ಯ ರೋಗಗಳು, ಲಸಿಕೆ ಮತ್ತು ನಾಯಿ ಕಡಿತವಾದಾಗ ಮಾಡಬೇಕಾದ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಳ್ಳುವ ಕುರಿತು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಮೂಢನಂಬಿಕೆಗೆ ಒಳಗಾಗದೇ ಸೂಕ್ತಚಿಕಿತ್ಸೆ ಪಡೆದಲ್ಲಿ ರೇಬಿಸ್ ಬಾರದಂತೆ ತಡೆಗಟ್ಟಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ತಾಲೂಕಿನ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಐಡಿಎಸ್‍ಪಿ ಹಾಗೂ ಎನ್‍ಸಿಡಿ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು. ಎಂ.ಜಿ.ದೇಸಾಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Kshetra Samachara
29/09/2022 09:14 pm