ಧಾರವಾಡ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್‍ನಲ್ಲಿ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಧಾರವಾಡ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಕರ್ತವ್ಯದಲ್ಲಿರುವುದರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಧಾರವಾಡ ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನ, ಸ್ವ್ಯಾಬ್ ಸಂಗ್ರಹ ಹಾಗೂ ಸೋಂಕಿತರ ಚಿಕಿತ್ಸೆ ಕುರಿತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಿರಿಯ ಅಧಿಕಾರಿಗಳ ತಂಡಗಳನ್ನು ರಚಿಸಿ ಪ್ರಮುಖ ಜನಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ಮಾಡಿ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರಿಂದ ದಂಡ ಸಂಗ್ರಹದೊಂದಿಗೆ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡಕ್ಕಿಂತ ಹೆಚ್ಚಾಗಿ ಜಾಗೃತಿ ಮೂಡಿಸುವ ಮತ್ತು ಅವರನ್ನು ತಪಾಸಣೆಗೆ ಒಳಪಡಿಸುವ ಕ್ರಮಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಸಂವಾದದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಆರ್. ಅಶೋಕ, ವೈದ್ಯಕೀಯ ಸಚಿವ ಡಾ: ಸುಧಾಕರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್‍ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ .ಬಿ., ಪಾಲಿಕೆ ಆಯುಕ್ತ ಡಾ: ಸುರೇಶ ಇಟ್ನಾಳ ಸೇರಿದಂತೆ ಇತರರು ಇದ್ದರು.
Kshetra Samachara
08/10/2020 06:50 pm