ಧಾರವಾಡ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಳೆ ಹೈಕೋರ್ಟ್‌ನಿಂದ ಆದೇಶ ಹೊರಬರುವ ಸಂಭವವಿದ್ದು, ಈ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಗ್ರಾಮೀಣ) ಮತೀಯ ಸೌಹಾರ್ಧತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 15-03-2022 ರಂದು ಬೆಳಿಗ್ಗೆ 06:00 ಗಂಟೆಯಿಂದ 19-03-2022 ರಂದು ಬೆಳಿಗ್ಗೆ 06:00 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಗ್ಗ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೇ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತು ಸೇರಿದಂತೆ ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಶವ, ಆಕೃತಿ, ಪ್ರತಿಮೆಗಳ ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
Kshetra Samachara
14/03/2022 09:28 pm