ಧಾರವಾಡ: ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಬಳಿಕ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳು ಈಗ ಹಂತ ಹಂತವಾಗಿ ಪುನರಾರಂಭಗೊಂಡಿವೆ. ಆದರೆ ಈಗ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ದಿನಕ್ಕೊಂದು ಸಮಸ್ಯೆ ಉದ್ಭವವಾಗುತ್ತಿದೆ. ವಿದ್ಯಾರ್ಥಿಗಳಿಗೆ ಕೊಡಲೇ ಬಸ್ ಸೌಲಭ್ಯ, ಶಿಷ್ಯವೇತನ ಬಿಡುಗಡೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಬೇಕು. ಶಾಲೆ, ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ದಿನಕ್ಕೆ ಒಂದು ಅಥವಾ ಎರಡು ಬಸ್‌ಗಳು ಮಾತ್ರ ಸಂಚರಿಸುತ್ತಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿದೆ. ಇನ್ನು ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ ಡಿಪ್ಲೋಮಾ ಎಂಜಿನಿಯರಿಂಗ್, ಸ್ನಾತಕ, ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿಎಚ್‌ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
Kshetra Samachara
16/09/2021 03:51 pm