ಧಾರವಾಡ: ನೀರು ಪ್ರತಿ ಜೀವಿಗೂ ಅವಶ್ಯವಾಗಿದೆ, ಅಂತರ್ಜಲ ಸಂರಕ್ಷಣೆ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ನೀರನ್ನು ಹಿತಮಿತವಾಗಿ ಸದ್ಬಳಕೆ ಮಾಡಿಕೊಂಡು ಮುಂದಿನ ಪೀಳಿಗೆಗಳಿಗೆ ಜೀವಜಲ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಎರಡನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ಹೇಳಿದರು.
ಧಾರವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಧಾರವಾಡ ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾವ೯ಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ದಿ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ ಸಭಾಭವನದಲ್ಲಿ ಏರ್ಪಡಿಸಿದ್ದ ವಿಶ್ವ ಜಲದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭೂಮಿಯು ಶೇ.70 ರಷ್ಟು ನೀರಿನಿಂದ ಆವೃತವಾಗಿದ್ದರೂ, ಶೇ 2.5 ಷ್ಟು ಮಾತ್ರ ಶುದ್ಧ ಕುಡಿಯುವ ನೀರಿನ ಪ್ರಮಾಣವಿದೆ. ನೀರು ಸಕಲ ಚರಾಚರ ಜೀವಿರಾಶಿಗಳಿಗೂ ಅತ್ಯಗತ್ಯವಾಗಿದೆ. ನೀರು ವ್ಯರ್ಥವಾಗದಂತೆ ನೋಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ ಮಾತನಾಡಿ, ನೀರನ್ನು ಅನವಶ್ಯಕವಾಗಿ ವ್ಯರ್ಥ ಮಾಡಬಾರದು. ನೀರು ಉಳಿಸಿ ಜೀವ ಉಳಿಸಬಹುದು. ಅಂತರ್ಜಲಮಟ್ಟ ಹೆಚ್ಚಿಸುವುದರಿಂದ ನಾಳಿನ ಪೀಳಿಗೆಗೆ ಅನುಕೂಲವಾಗುತ್ತದೆ ಎಂದರು.
ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಪೊಲೀಸ್ ಪಾಟೀಲ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಅಧೀಕ್ಷಕ ಅಭಿಯಂತರ ಎಸ್.ಬಿ.ಮಿರಾಜೆ ವೇದಿಕೆಯಲ್ಲಿದ್ದರು.
Kshetra Samachara
07/04/2022 10:07 pm