ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ; ಡಿಸಿ

ಧಾರವಾಡ: ಹಣದ ಆಮಿಷವೊಡ್ಡಿ ಮಹಿಳೆ ಮತ್ತು ಮಕ್ಕಳ ಮಾರಾಟ ಜಾಲದ ಮೂಲಕ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಕಾನೂನು ಬಾಹಿರ ಕೃತ್ಯಗಳಾಗಿವೆ. ಅಂತಹ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ಕಾರ್ಯಸೂಚಿಗಳ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಾಣಿಕೆಯ ಪ್ರಕರಣಗಳ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಕುಟುಂಬದ ಸದಸ್ಯರು, ತಂದೆ-ತಾಯಿಗಳು ಭಾಗಿಯಾಗಿದ್ದರೆ ಅಂತಹವರ ವಿರುದ್ಧ ಕಠಿಣ ಕಾನೂನು ಶಿಕ್ಷೆಗೆ ಅವಕಾಶವಿದೆ. ಪ್ರತಿಯೊಂದು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿ ಆರ್ಥಿಕ ಸಮಾನತೆ ಕಾಣಬೇಕು. ಇಂತಹ ಕಳ್ಳ ಸಾಗಾಣಿಕೆಯಲ್ಲಿ ಸಿಲುಕದೇ, ಮಹಿಳೆಯರು ಮತ್ತು ಮಕ್ಕಳು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಸುರಕ್ಷಿತ ಸಮಾಜದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಜಾಗರೂಕತೆವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಡಾ.ಸುರೇಶ ಇಟ್ನಾಳ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ಪ್ರತಿಯೊಂದು ಗ್ರಾಮ ಪಂಚಾಯತ ಮಟ್ಟದಿಂದಲೇ ತಡೆಯಬೇಕು. ಜನರಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಾಗಾರಗಳು ಹೆಚ್ಚು ಸಂಖ್ಯೆಯಲ್ಲಿ ನಡೆಯಬೇಕು ಎಂದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವ ಕಾಯ್ದೆ ಗ್ರಾಮ ಮಟ್ಟ ಸಮಿತಿಯಿಂದಲೇ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡು ಕಳ್ಳ ಸಾಗಾಣಿಕೆ ಜಾಲಕ್ಕೆ ಸೇರಿಸುವ ಶಕ್ತಿಗಳನ್ನು ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಲಿಯಮ್ ಕ್ರಿಸ್ಟೋಫರ್ ಮಾತನಾಡಿ, ಸಂವಿಧಾನದ ಐಪಿಸಿ ಕಲಂ 370 ರ ಅನ್ವಯ ಮಾನವ ಕಳ್ಳ ಸಾಗಾಣಿಕೆ ನಿಷೇಧವಾಗಿದೆ. ರಾಜ್ಯದಲ್ಲಿ ಉನ್ನತ ಮಟ್ಟದ ಸಮಿತಿಗಳ ಮಾದರಿಯಲ್ಲಿ, ಪ್ರತಿ ಜಿಲ್ಲೆಗಳಲ್ಲಿ ಸಮಿತಿಗಳು ರಚನೆಯಾಗಬೇಕು. ಜೀತ ಪದ್ಧತಿ, ಬಾಲ ಕಾರ್ಮಿಕ ಪದ್ದತಿ ಕೂಡ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳ ವ್ಯಾಪ್ತಿಗೆ ಒಳಪಡುತ್ತವೆ. ಬಡತನ, ನಿರುದ್ಯೋಗ, ಅನಕ್ಷರತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನಗಳಲ್ಲಿ ಹೆಚ್ಚಾಗಿದೆ. ಆ ಸಮುದಾಯಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿವೆ. ಸಮಾಜದಲ್ಲಿನ ಇಂತಹ ಅನಿಷ್ಟ ಪಿಡುಗನ್ನು ಹೋಗಲಾಡಿಸಲು ಎಲ್ಲರೂ ಪಣತೊಡಬೇಕು ಎಂದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಮ್. ಮಾತನಾಡಿ, ನಮ್ಮ ದೇಶದ ಕಾನೂನು ಇತರೆ ಎಲ್ಲಾ ದೇಶಗಳ ಕಾನೂನುಗಳಿಗಿಂತ ಉತ್ತಮವಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

Edited By : PublicNext Desk
Kshetra Samachara

Kshetra Samachara

08/04/2022 09:57 pm

Cinque Terre

6.32 K

Cinque Terre

0

ಸಂಬಂಧಿತ ಸುದ್ದಿ