ಧಾರವಾಡ: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಡೆದ ಮನೆಗಳಾಗಿವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಪರಿಷತ್ ಚುನಾವಣೆಗೆ ನಿಲ್ಲಿಸಿದ್ದರೂ ಅವರನ್ನು ಬಿಟ್ಟು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದನ್ನು ನೋಡಿದರೆ ಪಕ್ಷದಲ್ಲಿ ಎಷ್ಟು ಬದ್ಧತೆ ಇದೆ ಎಂಬುದು ಗೊತ್ತಾಗುತ್ತದೆ ಎಂದರು.
ಕಳೆದ ವರ್ಷ ಬಿಜೆಪಿ ಅಭ್ಯರ್ಥಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಸ್ತೆಗಳು ಹದಗೆಟ್ಟಿವೆ. ಮಳೆ ಬಿಡುವು ಕೊಟ್ಟರೆ ಕಾಮಗಾರಿ ಆರಂಭಿಸಬೇಕು ಎಂದು ನಾವೂ ಕಾಯುತ್ತಿದ್ದೇವೆ. ಮಳೆ ಬಿಡುವು ಕೊಡುತ್ತಿಲ್ಲ. ಮಳೆ ಬಿಡುವು ಕೊಟ್ಟರೆ ಎಲ್ಲ ರಸ್ತೆಗಳು ಸುಧಾರಣೆ ಆಗಲಿವೆ ಎಂದರು.
ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಹಂತ ಹಂತವಾಗಿ ಪರಿಸ್ಥಿತಿ ನೋಡಿಕೊಂಡು ಶಾಲೆ, ಕಾಲೇಜುಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
Kshetra Samachara
23/10/2020 08:31 pm