ಹುಬ್ಬಳ್ಳಿ: ನರಗುಂದ- ನವಲಗುಂದ 42ನೇ ವರ್ಷದ ಹುತಾತ್ಮರ ದಿನಾಚರಣೆ ಅಂಗವಾಗಿ ಜುಲೈ 21ರಂದು ನವಲಗುಂದ ಪಟ್ಟಣದಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಗುಂದ-ನವಲಗುಂದ ರೈತರ ಮೇಲೆ 42 ವರ್ಷಗಳ ಹಿಂದೆ ಅಮಾನುಷ ದೌರ್ಜನ್ಯ ನಡೆದಿತ್ತು. ಈ ಸಂದರ್ಭ 153 ರೈತರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದರು. ಅಲ್ಲದೆ, ದೇಶದಲ್ಲಿ 10 ಲಕ್ಷ ಹಾಗೂ ರಾಜ್ಯದಲ್ಲಿ 40 ಸಾವಿರಕ್ಕೂ ಅಧಿಕ ರೈತರು ಹಲವಾರು ಕಾರಣಗಳಿಂದಾಗಿ ಸಾವನ್ನಪ್ಪಿದ್ದಾರೆ. ಸರ್ಕಾರಗಳು ರೈತರ ಮಾರಣಹೋಮ ಮಾಡುತ್ತಲೇ ಇದೆ. ಈ ಕಾರಣದಿಂದ ಎಲ್ಲ ರೈತರನ್ನು ಒಗ್ಗೂಡಿಸುವುದರ ಜೊತೆಗೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನು, ಸಮಾವೇಶದಲ್ಲಿ ರೈತ ವಿರೋಧಿ 3 ಕೃಷಿ ಕಾಯಿದೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯುವುದು, ಅತಿವೃಷ್ಟಿ, ಅನಾವೃಷ್ಟಿಗೆ ಒಳಗಾದ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸುವುದು, ರೈತರ ಸಾಲಮನ್ನಾ ಮಾಡುವುದು, ರೈತರ ಬೆಳೆಗಳಿಗೆ ಯೋಗ್ಯ ಬೆಲೆ ನೀಡುವುದು, ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಕುರಿತು, ರಾಜ್ಯದಲ್ಲಿ ಸಮಗ್ರ ನೀರಾವರಿ ಯೋಜನೆ ಜಾರಿ ಮಾಡುವುದು, ಬಗರ್ ಹುಕ್ಕುಂ ಸಾಗುವಳಿಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಸಹಿತ ಇತರ ವಿಷಯಗಳ ಕುರಿತು ಚರ್ಚಿಸಲಾಗುವುದು. ಅಲ್ಲದೆ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.
Kshetra Samachara
12/07/2022 04:01 pm