ಧಾರವಾಡ: ಸಹಕಾರಿ ಇಲಾಖೆಯಿಂದ ರೈತರು, ವ್ಯಾಪಾರಿಗಳು, ಉದ್ಯಮಿದಾರರು ಸೇರಿದಂತೆ ಸ್ವಸಹಾಯ ಸಂಘಗಳಿಗೆ ವಿವಿಧ ಸಾಲ ಸೌಲಭ್ಯಗಳ ಮೂಲಕ ಅಭಿವೃದ್ಧಿ ಸಾಧಿಸಲು ಮತ್ತು ಆತ್ಮ ನಿರ್ಭರ ಯೋಜನೆಯ ಸದುಪಯೋಗಕ್ಕಾಗಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಪ್ರತ್ಯೇಕವಾಗಿ ಸಹಕಾರಿ ಇಲಾಖೆಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಹೇಳಿದರು.
ನಗರದ ಕಲಾಭವನದಲ್ಲಿ ಸಹಕಾರ ಇಲಾಖೆಯು ಕೋವಿಡ್-19 ರ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿದ ವಿವಿದ ಯೋಜನೆಗಳಡಿ ಬೆಳಗಾವಿ ಪ್ರಾಂತದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ಆಯೋಜಿಸಿದ್ದ ಆರ್ಥಿಕ ಸ್ಪಂದನ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಸಹಕಾರಿ ಇಲಾಖೆಯಿಂದ ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇವುಗಳ ಉಪಯುಕ್ತತೆ ಹಾಗೂ ಪರಿಣಾಮಕಾರಿ ಅನುಷ್ಠಾನದ ಕುರಿತು ಪರಿಶೀಲಿಸುವ ಅಗತ್ಯವಿದೆ. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ಇಲಾಖೆಯ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಮತ್ತು ಮುಂದಿನ ದಿನಗಳಲ್ಲಿ ಉಸ್ತುವಾರಿ ವಹಿಸಲು ನಾಲ್ಕು ಕಂದಾಯ ವಿಭಾಗಗಳಿಗೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಕ್ರಮಕೈಗೊಳ್ಳಲಾಗುವುದೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ ಸೇರಿದಂತೆ ಅನೇಕರು ಇದ್ದರು.
Kshetra Samachara
13/11/2020 09:41 pm