ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಪಡೆಯಲು ಧಾರವಾಡ ಮಹಾನಗರ ಪಾಲಿಕೆಯಲ್ಲಿ ಐದು ಕೇಂದ್ರಗಳನ್ನು ತೆರೆಯಲಾಗಿದೆ.
ಇಂದಿನಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಕೇಂದ್ರಕ್ಕೆ ಬಂದು ಅರ್ಜಿ ನಮೂನೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಪ್ರತಿ ಐದಾರು ವಾರ್ಡಿಗೆ ಒಂದರಂತೆ ಒಟ್ಟು ಐದು ಕೇಂದ್ರಗಳನ್ನು ತೆರೆದು ಅಲ್ಲಿ ಆಯಾ ವಾರ್ಡಿಗೆ ಸಂಬಂಧಿಸಿದ ಅಭ್ಯರ್ಥಿಗಳಿಂದ ನಾಮಪತ್ರ ಪಡೆಯುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಧಾರವಾಡದ ಒಟ್ಟು 30 ವಾರ್ಡಿಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಪಾಲಿಕೆಯಲ್ಲೇ ಐದು ನಾಮಪತ್ರ ಸ್ವೀಕೃತಿ ಕೇಂದ್ರ ತೆರೆಯಲಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ತುರುಸಿನ ತಯಾರಿ ನಡೆಸಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಮೂರೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಚುನಾವಣಾ ಅಖಾಡಕ್ಕೆ ಇಳಿಯಲಿವೆ.
ಇದರ ಮಧ್ಯೆ ಪಕ್ಷೇತರ ಅಭ್ಯರ್ಥಿಗಳು ಕೂಡ ಬಿರುಸಿನ ಕಸರತ್ತು ನಡೆಸಿದ್ದು, ಪಾಲಿಕೆಗೆ ಬಂದು ಅರ್ಜಿ ನಮೂನೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಮಧ್ಯಾಹ್ನದವರೆಗೂ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ನಾಳೆಯಿಂದ ಅಭ್ಯರ್ಥಿಗಳು ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಾಮಪತ್ರ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ. ಪಕ್ಷೇತರ ಅಭ್ಯರ್ಥಿಗಳಿಗೂ ಕೂಡ ಚಿನ್ಹೆಗಳನ್ನು ನೀಡಲಾಗಿದ್ದು, ಅದರಲ್ಲಿ ತಮಗೆ ಬೇಕಾದ ಚಿನ್ಹೆಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
Kshetra Samachara
16/08/2021 03:19 pm