ಧಾರವಾಡ: ಕೇಂದ್ರ ಗೃಹ ಮಂತ್ರಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾ ನಿಯಂತ್ರಣಕ್ಕಾಗಿ ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿರುವ ನಿಯಮಗಳನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೆಶನದಂತೆ ಪಾಲಿಸಲಾಗುವುದು.
ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಎರಡು ಹಂತದಲ್ಲಿ ಜರುಗುವ 136 ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನಕ್ಕೆ ಆಗಮಿಸುವ ಪ್ರತಿ ಮತದಾರ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಮತ್ತು ಕೋವಿಡ್ ಆರೋಗ್ಯ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಪ್ರತಿಯೊಬ್ಬರು ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕೊಠಡಿಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರು ಕೈಗಳನ್ನು ಸ್ಯಾನಿಟೈಸರ್ ಮೂಲಕ ಶುಚಿಗೊಳಿಸಿಕೊಳ್ಳಬೇಕು.
ರಾಜ್ಯ ಸರ್ಕಾರ ಹೊರಡಿಸುವ ಕೋವಿಡ್ ಮಾರ್ಗಸೂಚಿಗಳನ್ವಯ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದಿದ್ದಾರೆ.
ಅಭ್ಯರ್ಥಿಗಳ ಚುನಾವಣಾ ಪ್ರಚಾರ: ಗ್ರಾಮ ಪಂಚಾಯತಿ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿ ಬಹಳ ಚಿಕ್ಕದಾಗಿರುವುದರಿಂದ, ಅಭ್ಯರ್ಥಿಗಳ ಪ್ರಚಾರ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ.
ಕಡಿಮೆ (ಗರಿಷ್ಟ 5 ಜನ) ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ಮಾಡಬಹುದು.
ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಫೇಸ್‌ಮಾಸ್ಕ್ ಧರಿಸಿರಬೇಕು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು.
ಕೋವಿಡ್ ಹಿನ್ನೆಲೆಯಲ್ಲಿ ಗುಂಪು ಗುಂಪುಗಳಾಗಿ ಪ್ರಚಾರ ಮಾಡುವಂತಿಲ್ಲ. ಪಾಸಿಟಿವ್ ಇರುವ ಅಭ್ಯರ್ಥಿಗಳು ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡುವಂತಿಲ್ಲ.
ಅವರು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ.
Kshetra Samachara
03/12/2020 03:01 pm