ಧಾರವಾಡ: ಕಳೆದ ಮೇ 22 ರಂದು ಮುಗಿಯಬೇಕಿದ್ದ ಧಾರವಾಡದ ಐಐಟಿ ಕಟ್ಟಡ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಯದ ಕಾರಣ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಬಳಿ ನಿರ್ಮಾಣವಾಗುತ್ತಿರುವ ಐಐಟಿ ಶಾಶ್ವತ ಕಟ್ಟಡ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಜೋಶಿ ಅವರು, ಐಐಟಿ ನಿರ್ದೇಶಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು. ಈ ಕಟ್ಟಡ ಕಾಮಗಾರಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಕಳೆದ ಮೇ 22ಕ್ಕೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು.
ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ಈ ಕಟ್ಟಡ ಉದ್ಘಾಟನೆಗೆ ಪ್ರಧಾನಿ ಅವರನ್ನು ಕರೆಯಿಸುವ ಉದ್ದೇಶವಿದ್ದು, ಈಗ ಮತ್ತೊಂದು ಬಾರಿ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗುವುದು ಎಂದು ಜೋಶಿ ತಿಳಿಸಿದರು.
ಐಐಟಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಜೋಶಿ ಅವರು ಕಾಮಗಾರಿ ಬಗ್ಗೆ ಮಾಹಿತಿ ಪಡೆದು ಶೀಘ್ರವೇ ಯೋಜನೆಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/09/2022 05:23 pm