ಧಾರವಾಡ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ವಿಧಾನಸೌಧದವರೆಗೂ ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಾವು ಒಂದು ದಿನ ಉಪವಾಸ ಸತ್ಯಾಗ್ರಹ ಮಾಡಿದಾಗ ಸಿಎಂ ಯಡಿಯೂರಪ್ಪನವರು ಪಂಚಮಸಾಲಿ ಸಮಯದಾಯವನ್ನು 2ಎ ಸೇರಿಸಲಾಗುವುದು ಎಂದು ದೂರವಾಣಿ ಕರೆ ಮೂಲಕ ಹೇಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದರು. ಆದರೆ, ಇದುವರೆಗೂ ಯಾವುದೇ ಬೆಳವಣಿಗೆ ಆಗಿಲ್ಲ. ಕಳೆದ 20 ವರ್ಷಗಳಿಂದ ನಾವು ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ಯಾವುದೇ ಸರ್ಕಾರ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವ ಕೆಲಸ ಮಾಡಿಲ್ಲ ಎಂದರು.
ಪಂಚಮಸಾಲಿ ಸಮಾಜ ಕೃಷಿಯನ್ನೇ ನಂಬಿ ಬದುಕುತ್ತಿರುವ ಸಮಾಜ. ನಾವು ಪಾದಯಾತ್ರೆ ಮಾಡುವುದರಿಂದ ಮುಜುಗರ ಉಂಟಾಗುವುದು ಗ್ಯಾರಂಟಿ. ಜ.14 ರಿಂದ ನಾವು ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲಿದ್ದೇವೆ. ಪಾದಯಾತ್ರೆಯಲ್ಲಿ 2 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಏನಾದರೂ ಘಟನೆಗಳಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದರು.
Kshetra Samachara
02/01/2021 07:15 pm