ಧಾರವಾಡ: ಜನರ ಮನೆ ಬಾಗಿಲಿಗೆ ಸರ್ಕಾರ ಸೇವೆಗಳನ್ನು ತಲುಪಿಸಲು ಆಯೋಜಿಸುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ತುಂಬಾ ಯಶಸ್ವಿಯಾಗಿದ್ದು. ದೀಪಾವಳಿ ಹಬ್ಬದ ನಂತರ ಧಾರವಾಡ ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ವತಃ ತಾವೇ ಕಂದಾಯ ಅದಾಲತ್ ಆಯೋಜಿಸಿ ಸ್ಥಳದಲ್ಲಿಯೇ ಜನರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.
ಧಾರವಾಡ ತಾಲ್ಲೂಕಿನ ವನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.
ಕರ್ನಾಟಕ ಸರ್ಕಾರವು ಆರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿದ್ದು, ಸಾರ್ವಜನಿಕರು ಗ್ರಾಮಗಳಿಗೆ ಅಧಿಕಾರಿಗಳನ್ನು ಪ್ರೀತಿ, ವಿಶ್ವಾಸ, ಅಭಿಮಾನದಿಂದ ಸ್ವಾಗತಿಸುತ್ತಿದ್ದಾರೆ. ಇದರಿಂದ ಇನ್ನಷ್ಟು ಕೆಲಸ ಮಾಡಲು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಪ್ರೋತ್ಸಾಹವಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕೂರು ಗ್ರಾಮ ಪಂಚಾಯತ ಅಧ್ಯಕ್ಷೆ ರೇಣುಕಾ ಆರೆಣ್ಣವರ ವಹಿಸಿದ್ದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ, ಉಪ ವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ತಹಶೀಲ್ದಾರ ಸಂತೋಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಂತರ ವನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
Kshetra Samachara
16/10/2021 10:39 pm