ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಶಾಶ್ವತ ಅಂಗನವಾಡಿ ಕಟ್ಟಡ ನಿರ್ಮಿಸಿ ಕೊಡುವಂತೆ ಅಂಗನವಾಡಿ ಶಿಕ್ಷಕಿಯೊಬ್ಬರು ಮೊನ್ನೆಯಷ್ಟೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು. ಆ ಪ್ರತಿಭಟನೆಗೆ ಇದೀಗ ಸ್ಪಂದನೆ ದೊರೆತಿದೆ.
ಶಾಸಕ ಅಮೃತ ದೇಸಾಯಿ ಅವರು, ಹೆಬ್ಬಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಸ್ಥಾಪನೆ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಶಾಸಕರ ಪ್ರಸ್ತಾವನೆ ಮೇರೆಗೆ ಜೋಶಿ ಅವರು, ಹೆಬ್ಬಳ್ಳಿ ಗ್ರಾಮದಲ್ಲಿ ಶಾಶ್ವತ ಅಂಗನವಾಡಿ ಕೇಂದ್ರ ಸ್ಥಾಪಿಸುವಂತೆ ನಿರ್ಮಿತ ಕೇಂದ್ರದ ಅಧಿಕಾರಿಗೆ ಸೂಚನೆ ನೀಡಿದ್ದಾರೆ.
ಎನ್ಎಂಡಿಸಿ ಕಂಪೆನಿಗೆ ಸಿಎಸ್ಆರ್ ಅನುದಾನಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 10 ಅಂಗನವಾಡಿ ಕಟ್ಟಡ ನಿರ್ಮಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಕಾಮಗಾರಿಯನ್ನು ತಕ್ಷಣವೇ ಆರಂಭಿಸುವಂತೆಯೂ ಸೂಚನೆ ನೀಡಿದ್ದಾರೆ. ಅದರ ಅಂಗವಾಗಿ ಹೆಬ್ಬಳ್ಳಿ ಗ್ರಾಮದ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ಕೇಂದ್ರ ಸಚಿವರ ತುರ್ತು ಸ್ಪಂದನೆಗೆ ಶಾಸಕ ಅಮೃತ ದೇಸಾಯಿ ಧನ್ಯವಾದ ಸಲ್ಲಿಸಿದ್ದಾರೆ.
Kshetra Samachara
04/12/2021 05:40 pm