ಧಾರವಾಡ: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಸತತ ಏಳು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಬಸವರಾಜ ಹೊರಟ್ಟಿ ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ತೊಡೆ ತಟ್ಟಲಿದ್ದಾರೆ.
ಇನ್ನೇನು ಕೆಲವೇ ತಿಂಗಳಲ್ಲಿ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಬಸವರಾಜ ಗುರಿಕಾರ ಅವರ ಹೆಸರು ಅಂತಿಮಗೊಂಡಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ಅವರು ಅಧಿಕೃತ ಆದೇಶ ಹೊರಡಿಸಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಗುರಿಕಾರ ಅವರಿಗೆ ಸೂಚನೆ ನೀಡಿದ್ದಾರೆ. ಆದರೆ, ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮಗೊಂಡಿಲ್ಲ.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಆಗಿದ್ದ ಬಸವರಾಜ ಹೊರಟ್ಟಿ ಸತತ ಏಳು ಬಾರಿ ಆಯ್ಕೆಯಾಗಿದ್ದಾರೆ. ಈಗ ಸಭಾಪತಿಯಾಗಿರುವ ಹೊರಟ್ಟಿ ಯಾವ ಪಕ್ಷದಿಂದ ಸ್ಪರ್ಧೆ ನಡೆಸಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಅವರು ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ನಡೆಯುತ್ತಿವೆ.
ಬಸವರಾಜ ಗುರಿಕಾರ ಅವರು 42 ವರ್ಷಗಳಿಂದ ಶಿಕ್ಷಕರ ಸಂಘದ ಪದಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಮಾತ್ರವಲ್ಲದೇ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಈಗ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧೆ ಮಾಡುತ್ತಿದ್ದಾರೆ. ಶಿಕ್ಷಕರ ಸಂಘದ ಮೂಲಕ ಶಿಕ್ಷಕರ ಕ್ಷೇಮಾಭಿವೃದ್ಧಿಗೆ ಮಾಡಿದ ಕೆಲಸಗಳು ನನ್ನ ನೆರವಿಗೆ ಬರಲಿವೆ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ ಎಂದು ಗುರಿಕಾರ ತಿಳಿಸಿದ್ದಾರೆ.
Kshetra Samachara
27/01/2022 09:07 am