ಹುಬ್ಬಳ್ಳಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ನಿರ್ಧಾರ ಕೈ ಬಿಟ್ಟು ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಮಾಜಿ ಹಿರಿಯ ಹು-ಧಾ ಮಹಾನಗರ ಪಾಲಿಕೆ ಸದಸ್ಯ ಪ್ರಕಾಶ ಕ್ಯಾರಕಟ್ಟಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, 1978 ರಿಂದ ಕಾಂಗ್ರೆಸ್ ಪಕ್ಷ ಕಟ್ಟಲು ಶ್ರಮಿಸಿದ್ದೇನೆ. ಆದರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸುಖಾಸುಮ್ಮನೆ ಹಸ್ತಕ್ಷೇಪ ಮಾಡಿ, ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರನ್ನು ಮುಂದಿಟ್ಟುಕೊಂಡು ಪಕ್ಷದಲ್ಲಿ ಒಡಕು ಹುಟ್ಟು ಹಾಕುವ ಕೆಲಸ ಮಾಡಿದ್ದಾರೆ. ಇದಲ್ಲದೇ ನನಗೆ ಹು-ಧಾ ಮಹಾನಗರ ಪಾಲಿಕೆ ಟಿಕೆಟ್ ಕೈತಪ್ಪಿಸಿ ಅನ್ಯಾಯ ಮಾಡಿದ್ದಾರೆಂದು ಆರೋಪಿಸಿದರು.
ಅಲ್ಲದೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕೈಗೊಂಬೆಯಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಈ ಕಾರಣದಿಂದ ಮನನೊಂದು ಕಾಂಗ್ರೆಸ್ ಬಿಟ್ಟು ಫೆ.26ರಂದು ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದೆ. ಈ ವಿಷಯ ತಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿ.ಪ ಸದಸ್ಯ ಸಲೀಂ ಅಹ್ಮದ್ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ನನಗೆ ಕರೆದು ಸುದೀರ್ಘ ಚರ್ಚೆ ನಡೆಸಿದರು. ನಾನು ಕೂಡಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹು-ಧಾ ಪೂರ್ವ ವಿಧಾನಸಭೆಗೆ ಟಿಕೆಟ್ ಕೇಳಿದ್ದು, ಅವರು ಪರಿಶೀಲಿಸಿ ಕೊಡುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
Kshetra Samachara
15/02/2022 02:09 pm