ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಇರುವಾಗಲೇ ಧಾರವಾಡ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣಾ ಚಟುವಟಿಕೆಗಳು ತೀವ್ರ ಗರಿಗೆದರಿವೆ. ಅದರಲ್ಲೂ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಈಗಿನಿಂದಲೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಅಲ್ಲದೇ ತಮ್ಮದೇ ಪ್ರಭಾವ ಬಳಸಿ ಸಭೆಗಳನ್ನೂ ನಡೆಸುತ್ತಿದ್ದಾರೆ.
ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಈ ಬಾರಿ ಮತ್ತೊಮ್ಮೆ ಮಾಜಿ ಸಚಿವ ವಿನಯ ಕುಲಕರ್ಣಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇಸ್ಮಾಯಿಲ್ ತಮಟಗಾರ ಅವರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ದೊಡ್ಡಮಟ್ಟದಲ್ಲೇ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ತಮಗೆ ನೀಡಿದರೆ ಅಲ್ಲಿ ವಿನಯ ಕುಲಕರ್ಣಿ ಅವರು ತಮ್ಮ ಗೆಲುವಿಗೆ ಶ್ರಮಿಸಬೇಕು. ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಟಿಕೆಟ್‌ನ್ನು ವಿನಯ ಕುಲಕರ್ಣಿ ಅವರಿಗೆ ನೀಡಿದರೆ ಅವರ ಗೆಲುವಿಗೆ ನಾವು ಶ್ರಮಿಸುತ್ತೇವೆ ಎಂಬ ಹೇಳಿಕೆ ನೀಡುವ ಮುಖಾಂತರ ಇಸ್ಮಾಯಿಲ್ ತಮಟಗಾರ ಅವರು ಗ್ರಾಮೀಣ ಕ್ಷೇತ್ರದ ಮೇಲೆ ತಮಗಿರುವ ಒಲವನ್ನು ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಹೆಚ್ಚಾಗಿದ್ದು, ಅಲ್ಲಿ ಲಿಂಗಾಯತ ನಾಯಕರು ಸ್ಪರ್ಧಿಸಿದರೆ ಗೆಲುವು ಸಾಧ್ಯವಾಗಬಹುದು. ಅದೇ ರೀತಿ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡಿದರೆ ಇಬ್ಬರೂ ಗೆಲುವು ಸಾಧಿಸಬಹುದು ಎಂದಿದ್ದಾರೆ.
15 ವರ್ಷಗಳಿಂದ ಸಕ್ರೀಯ ರಾಜಕಾರಣದಲ್ಲಿದ್ದು, ನಾನೂ ಸಹ ನನ್ನ ನೆಲೆ ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದಿರುವ ಇಸ್ಮಾಯಿಲ್, ಈ ಬಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ವಿನಯ್ ಕುಲಕರ್ಣಿ ಅವರು ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಈಗಾಗಲೇ ಜೈಲುವಾಸ ಕೂಡ ಅನುಭವಿಸಿ ಬಿಡುಗಡೆಯಾಗಿದ್ದಾರೆ. ಆದರೆ, ನ್ಯಾಯಾಲಯ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿರುವುದರಿಂದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಈ ಎಲ್ಲ ಚಟುವಟಿಕೆಗಳು ಗರಿಗೆದರಿವೆ. ಇಸ್ಮಾಯಿಲ್ ಅವರಿಗೆ ಮಾಜಿ ಶಾಸಕ ಎ.ಎಂ.ಹಿಂಡಸಗೇರಿ ಸೇರಿದಂತೆ ಮುಸ್ಲಿಂ ಸಮುದಾಯದ ಅನೇಕ ಮುಖಂಡರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಚುನಾವಣೆ ಸಂದರ್ಭದಲ್ಲಿ ಎಲ್ಲಿ ಬಂದು ನಿಲ್ಲುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Kshetra Samachara
09/03/2022 08:07 pm