ಧಾರವಾಡ: ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್‌ಐಆರ್ ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಶ್ರೀಧರ ಸತಾರೆ ಅವರನ್ನು ಅಮಾನತ್ತು ಮಾಡಿದ್ದಕ್ಕೆ ಪ್ರತಿಭಟನೆ ತೀವ್ರಗೊಂಡಿದೆ.
ನಿನ್ನೆಯಷ್ಟೇ ದಲಿತ ಸಂಘಟನೆ ಮುಖಂಡರು ಧಾರವಾಡದ ಗ್ರಾಮೀಣ ಠಾಣೆ ಎದುರೇ ಪ್ರತಿಭಟನೆ ನಡೆಸಿದ್ದರು. ಆದರೆ, ಇಂದು ಮತ್ತೇ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಇನ್‌ಸ್ಪೆಕ್ಟರ್ ಶ್ರೀಧರ ಸತಾರೆ ಅವರ ಅಮಾನತ್ತು ಆದೇಶವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಇನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧವೂ ಘೋಷಣೆ ಕೂಗಿದ ದಲಿತ ಮುಖಂಡರು, ಸರ್ವೋದಯ ಶಿಕ್ಷಣ ಟ್ರಸ್ಟ್‌ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಶ್ರೀಧರ ಸತಾರೆ ಒಬ್ಬ ನಿಷ್ಠಾವಂತ ಪೊಲೀಸ್ ಅಧಿಕಾರಿ. ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿಕೊಂಡು ಸತಾರೆ ಅವರ ತಲೆದಂಡ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಧಿಕಾರಿಗಳನ್ನು ತುಳಿಯುವಂತಹ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಮೂರು ದಿನಗಳ ಒಳಗಾಗಿ ಸತಾರೆ ಅವರ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
14/03/2022 05:50 pm