ಧಾರವಾಡ: ಪ್ರತಿಭಟನೆ ವೇಳೆ, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟು, ಅವರಿಗೆ ಅಪಮಾನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲು ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಎರಡು ದಿನ ಗಡುವು ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಈ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ರಾತ್ರಿ ಉಪನಗರ ಠಾಣೆ ಎದುರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಯಿತು.
ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಕೂಡ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಮತ್ತೆ ಕೆಲಹೊತ್ತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎರಡು ದಿನಗಳ ಒಳಗಾಗಿ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಂತೆ ಗಡುವು ನೀಡಿ, ಠಾಣೆಗೆ ದೂರು ಸಹ ನೀಡಿದರು.
ಸದ್ಯ ಹಿಂದೂಪರ ಸಂಘಟನೆ ಕಾರ್ಯಕರ್ತರು ಕೊಟ್ಟ ದೂರನ್ನು ದಾಖಲಿಸಿಕೊಂಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಸಾಹಿಲ್ ಬಾಗ್ಲಾ ಹೇಳಿದರು.
ಹಿಂದೂ ಕಾರ್ಯರ್ತರು ಪೊಲೀಸರಿಗೆ ದೂರು ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು. ಎರಡು ದಿನಗಳ ಒಳಗಾಗಿ ಕ್ರಮ ಕೈಗೊಳ್ಳದೇ ಹೋದಲ್ಲಿ ಧಾರವಾಡ ಬಂದ್ ಜೊತೆಗೆ ಧಾರವಾಡ ಚಲೋ ಕಾರ್ಯಕ್ರಮಕ್ಕೆ ನಾವು ಮುಂದಾಗಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಸಿದರು.
Kshetra Samachara
20/08/2022 09:33 am